ರಾಯಚೂರು | ಅರ್ಹ ಫಲಾನುಭವಿಗಳು ಸರ್ಕಾರದ ಸೌಲಭ್ಯ ಪಡೆಯಿರಿ : ಡಾ.ಸಂಜಯ್ ಜಾಗೀರದಾರ್

ರಾಯಚೂರು : ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳು ಪಡೆಯಬೇಕೆಂದು ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಡಾ.ಸಂಜಯ್ ಜಾಗೀರದಾರ್ ಅವರು ಹೇಳಿದರು.
ಮೇ 28ರ ಬುಧವಾರದಂದು ನಗರದ ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದ ವಿವಿಧ ನಿಗಮಗಳಿಂದ ಅನೇಕ ಸೇವೆ, ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅಲ್ಪಸಂಖ್ಯಾತರ ಕಚೇರಿ ಸೇರಿದಂತೆ ನಿಗಮಕ್ಕೆ ಭೇಟಿ ನೀಡಿ ಯೋಜನೆ, ಸೌಲಭ್ಯಗಳ ಕುರಿತು ಮಾಹಿತಿ ಪಡೆಯಬೇಕು. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಸೌಲಭ್ಯ ಯೋಜನೆಗಳ ಬಗ್ಗೆ ಕರಪತ್ರಗಳನ್ನು ಹಂಚಿ ಫಲಾನುಭವಿಗಳಿಗೆ ಮಾಹಿತಿ ನೀಡುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ ಎಂದು ಅವರು ಹೇಳಿದರು.
371 (ಜೆ) ಜಾರಿ ಮುಂಚೆ ಈ ಭಾಗದಲ್ಲಿ ವೈದ್ಯರ ಸಂಖ್ಯೆ ಕಡಿಮೆಯಿದ್ದು, 371(ಜೆ) ಜಾರಿ ನಂತರ ವೈದ್ಯರು ಸೇರಿದಂತೆ ಇಂಜಿನಿಯರಗಳ ಸಂಖ್ಯೆ ಹೆಚ್ಚಳವಾಗಿದೆ. ಇದಕ್ಕೆ ಮುಖ್ಯ ಕಾರಣ ಈ ಭಾಗದ ಹಿರಿಯ ರಾಜಕಾರಣಿಯಾದ ಮಲ್ಲಿಕಾರ್ಜುನ ಖರ್ಗೆ ಅವರಾಗಿದ್ದಾರೆ ಎಂದು ಹೇಳಿದರು.
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶೇ.75ರಷ್ಟು ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ಹೇಳಿದರು.
ಈ ವೇಳೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಸಂಗಮೇಶ್ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ರಾಯಚೂರು ತಾಲೂಕು ವಿಸ್ತರಣಾಧಿಕಾರಿ ನರಸಿಂಹ ನಾಯಕ ಸೇರಿದಂತೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿಗಳು ಇದ್ದರು.







