ರಾಯಚೂರು: ಕೇಂದ್ರ ಸರ್ಕಾರದ ವಿರುದ್ಧ ʼಜೈಲ್ ಭರೋʼ ಚಳವಳಿ

ರಾಯಚೂರು: ಕೇಂದ್ರದ ಬಿಜೆಪಿ ಸರ್ಕಾರ ನೀತಿಗಳನ್ನು ವಿರೋಧಿಸಿ ಸಂಯುಕ್ತ ಕರ್ನಾಟಕ ಹೋರಾಟ ಸಮಿತಿ ನೀಡಿದ್ದ ಕರೆಗೆ ಮೇರೆಗೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ʼಜೈಲ್ ಭರೋʼ ನಡೆಸಿದರು.
ನಗರದ ಟಿಪ್ಪು ಸುಲ್ತಾನ ಗಾರ್ಡನ್ ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದ ನಗರದ ವಿವಿಧ ರಸ್ತೆಗಳ ಮೂಲಕ ತಹಸೀಲ್ ಕಚೇರಿಗೆ ತೆರಳಿ ಜೈಲ್ ಭರೋ ನಡೆಸಿದರು. ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಹಾಗೂ ಯುವಜನ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಜಿಲ್ಲಾ ಘಟಕದ ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಭೂಮಿಯನ್ನು ದೇಶಿ-ವಿದೇಶಿ ಕಂಪನಿಗಳ ಸುಪರ್ದಿಗೆ ಒಪ್ಪಿಸುತ್ತಿದ್ದು, ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಬೆಲೆ ಏರಿಕೆ, ನಿರುದ್ಯೋಗ, ಸಾಲದ ಹೊರೆ ಹಾಗೂ ಖಾಸಗೀಕರಣದಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕ ಸಂಘಟನೆಗಳ ನಿರಂತರ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ವೈಜ್ಞಾನಿಕ ಲೆಕ್ಕಾಚಾರದಲ್ಲಿ ಕನಿಷ್ಠ ವೇತನ ಪರಿಷ್ಕರಿಸಿ ಮೇ 22ರಂದು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಆದರೆ ಎರಡು ತಿಂಗಳು ಕಳೆದರೂ ಪರಿಷೃತ ವೇತನವನ್ನು ಜಾರಿಗೊಳಿಸಿಲ್ಲ. ಇದರಿಂದ ರಾಜ್ಯದ ಸುಮಾರು ಒಂದು ಕೋಟಿ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದು, ಮಾಲೀಕರ ಲಾಬಿಗೆ ಮಣಿಯದೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
‘ಕಾರ್ಪೋರೇಟ್‍ಗಳೇ ದೇಶ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದ ಸಂಘಟನೆಗಳ ಮುಖಂಡರು, ಬಲವಂತದ ಭೂಸ್ವಾಧೀನ ಮತ್ತು ಕಾರ್ಪೋರೇಟ್ ಭೂ ಕಬಳಿಕೆ ತಡೆಯಬೇಕು. ಕಾರ್ಮಿಕ ಸಂಹಿತೆಗಳ ಜಾರಿ ಹಿಂಪಡೆಯಬೇಕು.
ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸಿ, ಖಾಯಂಮೇತರ, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಮತ್ತು ಪಿಂಚಣಿ ನೀಡಬೇಕು. ಎಲ್ಲ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ರೈತರು, ಕೃಷಿ ಕೂಲಿಕಾರರು ಹಾಗೂ ಮಹಿಳೆಯರ ಸಾಲ ಮನ್ನಾ ಮಾಡಬೇಕು. ಬಗರ್‍ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಮತ್ತು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಶಾಶ್ವತ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪೆಟ್ರೋಲ್, ಡೀಸೆಲ್, ಗ್ಯಾಸ್, ವಿದ್ಯುತ್, ದಿನಸಿ ಹಾಗೂ ಸಾರಿಗೆ ದರಗಳ ಏರಿಕೆಗೆ ಕಡಿವಾಣ ಹಾಕಬೇಕು. ರಾಯಚೂರು ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು. ಫಸಲ್ ಭೀಮಾ ಯೋಜನೆಯಡಿ ರೈತರು ಪಾವತಿಸುವ ಪ್ರೀಮಿಯಂ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ರಾಯಚೂರಿನಲ್ಲಿ ಏಮ್ಸ್ ಆರಂಭಿಸಬೇಕು, ಡಿ.ರಾಮಪುರದಲ್ಲಿ ಕೃಷ್ಣ ನದಿಗೆ ತಡೆಗೋಡೆ ನಿರ್ಮಿಸಬೇಕು, ಎಲ್ಲ ತಾಲೂಕುಗಳಲ್ಲಿ ಭೂ ಮಂಜೂರಾತಿ ಸಮಿತಿಗಳನ್ನು ರಚಿಸಬೇಕು ಸೇರಿದಂತೆ ಜಿಲ್ಲೆಯ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ವಿದ್ಯುತ್ ತಿದ್ದುಪಡಿ ಕಾಯ್ದೆ-2025 ಹಿಂಪಡೆಯಬೇಕು, ಬೀಜ ಕಾಯ್ದೆ ಹಾಗೂ ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ನೀತಿಯನ್ನು ಕೈಬಿಡಬೇಕು. ರೈತರ ಭೂಮಿಯನ್ನು ವರ್ತುಲ ರಸ್ತೆ, ಕೈಗಾರಿಕೆ, ರೈಲ್ವೆ ಹಾಗೂ ವಿವಿಧ ಯೋಜನೆಗಳ ಹೆಸರಿನಲ್ಲಿ ಅನ್ಯಾಯವಾಗಿ ಸ್ವಾಧೀನಪಡಿಸಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಡಿ.ಎಸ್.ಶರಣಸವ. ಎನ್.ಎಸ್.ವೀರೇಶ, ಮಲ್ಲನಗೌಡ, ಮುದುಕಪ್ಪ ನಾಯಕ, ನರಸಣ್ಣನಾಯಕ, ಆಂಜಿನೇಯ್ಯ ಕುರುಬದೊಡ್ಡಿ, ಕರಿಯಪ್ಪ ಅಚ್ಚೋಳ್ಳಿ, ಎಚ್.ಪದ್ಮಾ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು






