Raichur | ಬರಪರಿಹಾರ, ರೈತರ ಸಾಲಮನ್ನಾ ಮಾಡಲು ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ರಾಯಚೂರು: ಬರಪೀಡಿತ ರಾಯಚೂರು ಜಿಲ್ಲೆಗೆ ಕೂಡಲೇ ಬರಪರಿಹಾರ ವಿತರಿಸಬೇಕು, ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಂಕಷ್ಟಕ್ಕೊಳಗಾದ ಪ್ರತಿ ರೈತರಿಗೆ 2,500 ರೂ. ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿರುವುದು ರೈತರಿಗೆ ಮಾಡಿದ ಅವಮಾನವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ದೇವದುರ್ಗ ಶಾಸಕಿ ಜಿ. ಕರೆಮ್ಮ ನಾಯಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ವಿವಿಧ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ, ಅಧಿಕಾರಕ್ಕೆ ಬಂದ ಬಳಿಕ ಅವುಗಳ ಅನುಷ್ಠಾನದಲ್ಲಿ ತಾರತಮ್ಯ ಮಾಡುತ್ತಿದೆ. ರೈತರ ಸಮಸ್ಯೆಗಳಿಗೆ ಸರ್ಕಾರ ಪ್ರಾಮಾಣಿಕವಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಬರಪೀಡಿತ ತಾಲೂಕುಗಳನ್ನು ಘೋಷಿಸಿದ ಬಳಿಕ ಪ್ರತಿ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ನೀಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿಯೂ ಶಾಸಕರು ಧ್ವನಿ ಎತ್ತಿದ್ದರೂ ಸರ್ಕಾರ ಸಮರ್ಪಕವಾಗಿ ಸ್ಪಂದಿಸಿಲ್ಲ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ರೈತರ ಸಾಲಮನ್ನಾ ಸೇರಿದಂತೆ ರೈತಪರ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗಿತ್ತು. ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದರು ಎಂದು ಅವರು ಹೇಳಿದರು.
ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ. ವಿರೂಪಾಕ್ಷಿ, ಮಹಾಂತೇಶ ಪಾಟೀಲ ಅತ್ತನೂರು, ವಕೀಲ ಶಿವಶಂಕರ, ಲಕ್ಷ್ಮೀಪತಿ, ಸಣ್ಣ ನರಸಿಂಹ ನಾಯಕ, ರವಿಕುಮಾರ, ರಾಮನಗೌಡ ಏಗನೂರು, ನರಸಪ್ಪ ಆಶಾಪುರ, ರಾಜು ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಹಾಗೂ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






