Raichur | ಅಡುಗೆ ಸಿಬ್ಬಂದಿ ಸ್ವಚ್ಛತೆ, ಸಮಯಪಾಲನೆಗೆ ಆದ್ಯತೆ ನೀಡಬೇಕು: ಡಾ.ಹಂಪಣ್ಣ ಸಜ್ಜನ್
ಅಡುಗೆ, ಸ್ವಚ್ಛತೆ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ರಾಯಚೂರು : ಅಡುಗೆ ಸಿಬ್ಬಂದಿ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ನಿಗದಿತ ಸಮಯದಲ್ಲಿ ಪೌಷ್ಟಿಕ ಆಹಾರ ತಯಾರಿಸಿ ವಿದ್ಯಾರ್ಥಿಗಳಿಗೆ ಒದಗಿಸಬೇಕು ಎಂದು ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್ ಹೇಳಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕ್ರೈಸ್ ವಸತಿ ಶಾಲೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುವ ಖಾಯಂ ಮತ್ತು ಹೊರ ಸಂಪನ್ಮೂಲ ಡಿ-ಗ್ರೂಪ್ ಸಿಬ್ಬಂದಿಗೆ ಅಡುಗೆ ತಯಾರಿಕೆ ಹಾಗೂ ಸ್ವಚ್ಛತೆ ಕಾಪಾಡುವ ಕುರಿತು ಆಯೋಜಿಸಿದ್ದ ಎರಡನೇ ದಿನದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಡುಗೆ ಸಿಬ್ಬಂದಿ ಕಡ್ಡಾಯವಾಗಿ ಸ್ವಚ್ಛವಾದ ಬಟ್ಟೆಗಳನ್ನು ಧರಿಸಬೇಕು. ಉಗುರುಗಳನ್ನು ಚಿಕ್ಕದಾಗಿ ಕತ್ತರಿಸಿಕೊಂಡು, ತಲೆಗೆ ಕ್ಯಾಪ್ ಹಾಗೂ ಕೈಗಳಿಗೆ ಕೈಗವಸುಗಳನ್ನು ಧರಿಸಿ ಅಡುಗೆ ಮಾಡಬೇಕು. ಶಾಲೆ ಅಥವಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿಯ ಊಟವನ್ನು ನಿಗದಿತ ಸಮಯಕ್ಕೆ ಸರಿಯಾಗಿ ಸಿದ್ಧಪಡಿಸಬೇಕು. ಸಮಯಪಾಲನೆ ಮಾಡದಿದ್ದರೆ ಆಹಾರ ತಯಾರಿಕೆಯಲ್ಲಿ ವ್ಯತ್ಯಾಸ ಉಂಟಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಅಲ್ಲದೆ, ಈ ಕುರಿತು ದೂರುಗಳು ಬರುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದರು.
ಪೂರ್ವ ಮೆಟ್ರಿಕ್ ಅಥವಾ ನಂತರದ ಮೆಟ್ರಿಕ್ ವಿದ್ಯಾರ್ಥಿ ನಿಲಯಗಳಲ್ಲಿ 50, 100, 200 ಹಾಗೂ 300 ವಿದ್ಯಾರ್ಥಿಗಳಿದ್ದರೂ ಅಡುಗೆ ಸಿಬ್ಬಂದಿ ಅವರೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ಸಂವಹನ ಹೊಂದಿರಬೇಕು. ಸಿಬ್ಬಂದಿ ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದಿಸದಿದ್ದರೆ ಅವರಿಂದ ದೂರುಗಳು ಬರುವ ಸಾಧ್ಯತೆಯಿದೆ ಎಂದರು.
ನಿಲಯಗಳ ಸಿಬ್ಬಂದಿಗೆ ಯಾವುದೇ ಸಮಸ್ಯೆಗಳಿದ್ದರೂ ನಿಲಯ ಪಾಲಕರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಲು ಅವಕಾಶವಿದೆ. ಮೂರು ದಿನಗಳ ತರಬೇತಿಯ ಮುಖ್ಯ ಉದ್ದೇಶ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಸ್ವಚ್ಛವಾದ ಆಹಾರ ಒದಗಿಸುವುದಾಗಿದೆ. ತರಬೇತಿ ಪಡೆದ ಬಳಿಕವೂ ನಿಯಮಗಳನ್ನು ಪಾಲಿಸದೆ ಲೋಪದೋಷಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ನೇರವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ವಸತಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ಹಾಗೂ ಉತ್ತಮ ನಿರ್ವಹಣೆಗಾಗಿ ಅಧಿಕಾರಿಗಳು ನೀಡಿರುವ ಕಟ್ಟುನಿಟ್ಟಿನ ಸೂಚನೆಗಳನ್ನು ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಶರಣಬಸವ ಮಾತನಾಡಿ, ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ತಯಾರಿಸುವಾಗ ಹಾಗೂ ವಿತರಿಸುವಾಗ ನಿರ್ಲಕ್ಷ್ಯ ತೋರಲಾಗುತ್ತಿದೆ ಮತ್ತು ನಿಗದಿತ ಸಮಯಕ್ಕೆ ಊಟ ದೊರೆಯದೆ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದಿವೆ. ಆದ್ದರಿಂದ ಅಡುಗೆಮನೆ ಹಾಗೂ ವಸತಿ ನಿಲಯದ ಆವರಣದಲ್ಲಿ ನೈರ್ಮಲ್ಯ ಮತ್ತು ಸ್ವಚ್ಛತೆಯನ್ನು ಕಾಪಾಡಬೇಕು. ಯಾವುದೇ ಕಾರಣಕ್ಕೂ ಅಡುಗೆ ಸಿಬ್ಬಂದಿ ಅಥವಾ ವಾರ್ಡನ್ಗಳು ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಬಾರದು. ತಪ್ಪುಗಳು ಮರುಕಳಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ವಸತಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ಒದಗಿಸುವುದರ ಜತೆಗೆ ಕಟ್ಟುನಿಟ್ಟಾಗಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಗಣ್ಯರು ಮಾಲಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ನಂದಿತಾ ಎಂ.ಎನ್., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣ ಶಾವಂತಗೇರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುನೀತಾ, ಜಿಲ್ಲಾ ವ್ಯವಸ್ಥಾಪಕ ತಿಮ್ಮರೆಡ್ಡಿ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರು, ನಿಲಯ ಪಾಲಕರು, ಅಡುಗೆ ಸಿಬ್ಬಂದಿ ಹಾಗೂ ಸಹಾಯಕರು ಉಪಸ್ಥಿತರಿದ್ದರು.






