Raichur | ಭೂಮಾಪಕ, ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಪೂವಿತಾ ಎಸ್.
ರಾಯಚೂರು : ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ ಇಲಾಖೆಯಲ್ಲಿನ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳು ಅ.2 ಹಾಗೂ ಅ.4ರಂದು ನಡೆಯಲಿದ್ದು, ಪರೀಕ್ಷೆಗಳು ಸುರಕ್ಷಿತವಾಗಿ ನಡೆಯಲು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪೂವಿತಾ ಎಸ್. ಅವರು ಆದೇಶ ಹೊರಡಿಸಿದ್ದಾರೆ.
ಅ.2ರಂದು ರಾಯಚೂರು ನಗರದ ಏಳು ಪರೀಕ್ಷಾ ಕೇಂದ್ರಗಳಲ್ಲಿ ಭೂಮಾಪಕರ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ನಡೆಯಲಿದೆ. ಅ.4ರಂದು ರಾಯಚೂರು 18, ದೇವದುರ್ಗ 3, ಲಿಂಗಸುಗೂರು 4, ಮಾನವಿ 7, ಸಿಂಧನೂರು 17 ಹಾಗೂ ಸಿರವಾರ 2 ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲ ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಅಂಗಡಿಗಳು ಹಾಗೂ ಸೈಬರ್ ಕೆಫೆಗಳನ್ನು ಕಡ್ಡಾಯವಾಗಿ ಮುಚ್ಚುವಂತೆ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.






