Raichur | ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಕೆ : ಎನ್.ರವಿಕುಮಾರ್
"ನ.2ರಿಂದ ರಾಜ್ಯಾದ್ಯಂತ ಬಿಜೆಪಿ ಪಾದಯಾತ್ರೆ"

ರಾಯಚೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಅಭ್ಯರ್ಥಿಗಳಿಗೆ ದೊರೆತ ಗೆಲುವು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ನೀಡಿರುವ ಎಚ್ಚರಿಕೆಯಾಗಿದೆ. ಶಿಕ್ಷಿತ ಮತದಾರರು ಸರ್ಕಾರದ ಕಾರ್ಯವೈಖರಿ, ದುರಾಡಳಿತ ಹಾಗೂ ದುರಹಂಕಾರದ ಹೇಳಿಕೆಗಳಿಗೆ ಮತದಾನದ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಸದಸ್ಯ ಎನ್. ರವಿಕುಮಾರ್ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಬಗ್ಗೆ ಜನರಲ್ಲಿರುವ ಅಸಮಾಧಾನವನ್ನು ಪ್ರತಿಬಿಂಬಿಸಿದೆ. ರಾಜ್ಯದ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿಲ್ಲ. ಖಜಾನೆ ಖಾಲಿಯಾಗಿದೆ ಎಂದು ಹೇಳುವ ಸರ್ಕಾರ ವಿವಿಧ ಯೋಜನೆಗಳ ಅನುಷ್ಠಾನದಲ್ಲಿಯೂ ವಿಫಲವಾಗುತ್ತಿದೆ ಎಂದು ಆರೋಪಿಸಿದರು.
ರೈತರಿಗೆ ಘೋಷಿಸಿದ ಪರಿಹಾರವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಶಿಕ್ಷಕರ ನೇಮಕಾತಿ ಸೇರಿದಂತೆ ಶಿಕ್ಷಣ ಕ್ಷೇತ್ರದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತಿಲ್ಲ. ಶಿಕ್ಷಕರನ್ನು ಬೋಧನೇತರ ಕೆಲಸಗಳಿಗೆ ನಿಯೋಜಿಸುವುದರಿಂದ ಅವರ ಶೈಕ್ಷಣಿಕ ಕಾರ್ಯಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ. ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸುವ ಬದಲು ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ದೂರಿದರು.
ರಾಜ್ಯ ಸರ್ಕಾರದ ಆಡಳಿತ ವೈಖರಿಗೆ ಶಿಕ್ಷಿತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಈ ಫಲಿತಾಂಶವು ಮುಂಬರುವ ಚುನಾವಣೆಗಳಲ್ಲಿಯೂ ಎನ್‌ಡಿಎಗೆ ಬೆಂಬಲ ದೊರೆಯುವ ಮುನ್ಸೂಚನೆಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹಾಗೂ ಜಾತಿ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡದಿರುವ ವಿಚಾರದಲ್ಲಿಯೂ ಸರ್ಕಾರ ಜನರಿಗೆ ಉತ್ತರಿಸಬೇಕಿದೆ ಎಂದರು.
ನ. 2ರಿಂದ ರಾಜ್ಯಾದ್ಯಂತ ಬಿಜೆಪಿ ಪಾದಯಾತ್ರೆ :
ದೇಶದಲ್ಲಿ ಕಾಂಗ್ರೆಸ್ ಹಾಗೂ ಐಎನ್‌ಡಿಐಎ ಒಕ್ಕೂಟ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ರವಿಕುಮಾರ್, ಇದರ ವಿರುದ್ಧ ಬಿಜೆಪಿ ವತಿಯಿಂದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಘೋಷಣೆಯೊಂದಿಗೆ ನವೆಂಬರ್ 2ರಿಂದ 6ರವರೆಗೆ ರಾಜ್ಯಾದ್ಯಂತ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ ಹತ್ತು ಕಡೆಗಳಲ್ಲಿ ಬಿಜೆಪಿ ವತಿಯಿಂದ ಈ ಕಾರ್ಯಕ್ರಮಗಳು ನಡೆಯಲಿದ್ದು, ಕಲಬುರಗಿ, ಕೊಪ್ಪಳ, ಚಿತ್ರದುರ್ಗ, ಮೈಸೂರು ಹಾಗೂ ಮಂಗಳೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪಾದಯಾತ್ರೆ ಮತ್ತು ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಜನರಿಗೆ ಮಾಹಿತಿ ನೀಡುವುದು ಹಾಗೂ ಈ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಐಎನ್‌ಡಿಐಎ ಒಕ್ಕೂಟ ಜನರನ್ನು ದಾರಿ ತಪ್ಪಿಸುತ್ತಿದೆ ಎಂಬ ಬಿಜೆಪಿಯ ಆರೋಪವನ್ನು ಜನರಿಗೆ ತಿಳಿಸುವುದು ಪಾದಯಾತ್ರೆಯ ಉದ್ದೇಶವಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಶಂಕ್ರಪ್ಪ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಂ. ಪಾಟೀಲ್ ಹಾಗೂ ರಾಜಕುಮಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಜಲ್ದಾರ್, ಸಂತೋಷ ರಾಜಗೂರು ಮತ್ತು ಜಂಬಣ್ಣ ನೀಲೋಗಲ್, ಜಿಲ್ಲಾ ವಕ್ತಾರ ಸಿದ್ದನಗೌಡ ನೆಲಹಾಳ್ ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.






