Raichur | ಬಿರ್ಸಾ ಮುಂಡಾ ಅವರ ಆದರ್ಶಗಳನ್ನು ಯುವಜನರು ಮೈಗೂಡಿಸಿಕೊಳ್ಳಲಿ: ಶಿವಮಾನಪ್ಪ

ರಾಯಚೂರು: ಬ್ರಿಟಿಷರ ವಸಾಹತುಶಾಹಿ ಆಡಳಿತ ಹಾಗೂ ಬುಡಕಟ್ಟು ಸಮುದಾಯದ ಮೇಲಿನ ಶೋಷಣೆಯ ವಿರುದ್ಧ ಜನರನ್ನು ಸಂಘಟಿಸಿ ಹೋರಾಟ ನಡೆಸಿದ ಭಗವಾನ್ ಬಿರ್ಸಾ ಮುಂಡಾ ಅವರು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರ ಆದರ್ಶಗಳನ್ನು ಯುವಜನರು ಮೈಗೂಡಿಸಿಕೊಳ್ಳಬೇಕು ಎಂದು ರಾಯಚೂರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ ಹೇಳಿದರು.
ನಗರದ ಆಶಾಪುರ ರಸ್ತೆಯ ವಾಲ್ಮೀಕಿ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 151ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಿರ್ಸಾ ಮುಂಡಾ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಬ್ರಿಟಿಷರ ದಬ್ಬಾಳಿಕೆ, ಶೋಷಣೆ ಹಾಗೂ ಬುಡಕಟ್ಟು ಜನರ ಹಕ್ಕುಗಳ ಉಲ್ಲಂಘನೆಯ ವಿರುದ್ಧ ಧ್ವನಿ ಎತ್ತಿದ್ದರು. 1890ರ ದಶಕದಲ್ಲಿ ತಮ್ಮ 25ನೇ ವಯಸ್ಸಿನಲ್ಲಿಯೇ ಬ್ರಿಟಿಷರ ವಿರುದ್ಧ ಹೋರಾಟಕ್ಕಾಗಿ ಜನರನ್ನು ಸಂಘಟಿಸಿ, ಅವರಲ್ಲಿ ಸ್ವಾಭಿಮಾನ ಹಾಗೂ ಹೋರಾಟದ ಮನೋಭಾವ ಬೆಳೆಸಿದ್ದರು. ಅವರ ತ್ಯಾಗ, ಹೋರಾಟ ಹಾಗೂ ಸಮಾಜದ ಮೇಲಿನ ಕಾಳಜಿ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.
2021ರಿಂದ ಸರ್ಕಾರ ಬಿರ್ಸಾ ಮುಂಡಾ ಜಯಂತಿಯನ್ನು ಆಚರಿಸುತ್ತಿದೆ. ಬುಡಕಟ್ಟು ಸಮುದಾಯದವರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.
ಸಮಾಜದ ಮುಖಂಡ ರಘುವೀರ ನಾಯಕ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬುಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಬೇಕು. ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಗೌರವ ಮತ್ತು ಕೀರ್ತಿ ತರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರುಕ್ಮಿಣಿಬಾಯಿ, ಏಕಲವ್ಯ ಮಾದರಿ ವಸತಿ ಶಾಲೆ ಕೊತ್ತದೊಡ್ಡಿಯ ಪ್ರಾಂಶುಪಾಲ ಸುರೇಶ್ ವರ್ಮಾ, ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಕಲ್ಮಲಾದ ಪ್ರಾಂಶುಪಾಲ ಕೊಟ್ರೇಶ್, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಗಾಣಧಾಳದ ಮಹಮ್ಮದ್ ಮೂಜಿಬ್, ವಾಲ್ಮೀಕಿ ಸಮಾಜದ ಮುಖಂಡ ರಾಮು ನಾಯಕ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ಶರಣಪ್ಪ ಹಾಗೂ ವಾರ್ಡನ್ ಬಸವರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.






