ರಾಯಚೂರು | ಕ್ರೀಡೆಯಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ : ಪುರುರಾಜ್ ಸಿಂಗ್ ಸೋಲಂಕಿ

ರಾಯಚೂರು, ಡಿ.25: ಕ್ರೀಡೆಗಳು ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಅತ್ಯಂತ ಅವಶ್ಯಕವಾಗಿದ್ದು, ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಯಾಂತ್ರಿಕ ಜೀವನದಲ್ಲಿ ಕ್ರೀಡೆಗಳಿಗೆ ಸಮಯ ಮೀಸಲಿಡಬೇಕು ಎಂದು ಪ್ರೊಬೆಷನರಿ ಐಎಎಸ್ ಅಧಿಕಾರಿ ಪುರುರಾಜ್ ಸಿಂಗ್ ಸೋಲಂಕಿ ಹೇಳಿದರು.
ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರು ರಿಪೋರ್ಟ್ಸ್ ಗಿಲ್ಡ್, ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ಸಂಘ ಮತ್ತು ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಗಳು ಒತ್ತಡ ನಿವಾರಣೆಗೆ ಸಹಕಾರಿಯಾಗುವುದರ ಜೊತೆಗೆ ಆರೋಗ್ಯಕರ ಜೀವನಕ್ಕೆ ಪೂರಕವಾಗಿವೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟಸಿಂಗ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಪತ್ರಕರ್ತರ ಆರೋಗ್ಯ ಮತ್ತು ಕ್ರೀಡಾ ಚಟುವಟಿಕೆಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ರಾಯಚೂರು ರಿಪೋರ್ಟ್ಸ್ ಗಿಲ್ಡ್ ಅಧ್ಯಕ್ಷ ವಿಜಯ್ ಜಾಗಟಗಲ್, ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಘದ ಅಧ್ಯಕ್ಷ ಚೆನ್ನಬಸವ ಬಾಗಲವಾಡ, ರಿಪೋರ್ಟ್ಸ್ ಗಿಲ್ಡ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹೂಗಾರ್, ಖಜಾಂಚಿ ಸಣ್ಣ ಈರಣ್ಣ, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಖಾನ್ ಸಾಬ್ ಮೋಮಿನ್, ಕ್ರೀಡಾ ವಸ್ತುವಾರಿಗಳಾದ ಶ್ರೀಕಾಂತ ಸಾವೂರು, ರಿಪೋರ್ಟ್ಸ್ ಗಿಲ್ಡ್ ನಿಕಟಪೂರ್ವ ಅಧ್ಯಕ್ಷ ಚೆನ್ನಬಸವಣ್ಣ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣಾ ಶಾವಂತಗೇರಿ ಸೇರಿದಂತೆ ಹಿರಿಯ ಹಾಗೂ ಕಿರಿಯ ಪತ್ರಕರ್ತರು ಉಪಸ್ಥಿತರಿದ್ದರು.
ಕ್ರಿಕೆಟ್ ಪಂದ್ಯಾವಳಿಯಲ್ಲಿ ಜಿಲ್ಲಾ ಪೊಲೀಸ್ ತಂಡ, ಜಿಲ್ಲಾ ಸರ್ಕಾರಿ ನೌಕರರ ತಂಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತಂಡ, ಅರಣ್ಯ ಇಲಾಖೆ ತಂಡ, ನ್ಯಾಯವಾದಿಗಳ ತಂಡ, ಕೆಎಸ್‌ಆರ್‌ಟಿಸಿ ಅಧಿಕಾರಿಗಳ ತಂಡ, ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರ ತಂಡ ಹಾಗೂ ಮುದ್ರಣ ಮಾಧ್ಯಮ ಪತ್ರಕರ್ತರ ತಂಡಗಳು ಭಾಗವಹಿಸಿದ್ದವು.







