ರಾಯಚೂರು | ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಜಿಲ್ಲಾಧಿಕಾರಿಗಳಿಂದ ಆದೇಶ

ರಾಯಚೂರು : ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಹಾಗೂ ವಿತರಣಾ ಕಾಲುವೆಗಳಡಿಯಲ್ಲಿ ಬರುವ ಎಲ್ಲಾ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ತುಂಗಭದ್ರಾ ಜಲಾಶಯದಿಂದ ರಾಯಚೂರು ಜಿಲ್ಲೆಗೆ ಕುಡಿಯುವ ನೀರನ್ನು ಒದಗಿಸುವ ಪ್ರಯುಕ್ತ, ಜಿಲ್ಲೆಯ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಹಾಗೂ ವಿತರಣಾ ಕಾಲುವೆಗಳ ಅಡಿಯಲ್ಲಿ ಬರುವ ಎಲ್ಲಾ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಆದೇಶಿಸಲಾಗಿದ್ದು, ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲೆಯ ಎಲ್ಲಾ ತಹಶೀಲ್ದಾರರು, ಎಲ್ಲಾ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ಎಲ್ಲಾ ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ಎಲ್ಲಾ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲಾ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಸಮನ್ವಯ ಹಾಗೂ ಸಹಯೋಗದೊಂದಿಗೆ ಮಾ.10ರೊಳಗೆ ಕುಡಿಯುವ ನೀರಿಗೆ ಸಂಬಧಿಸಿದ ಎಲ್ಲಾ ಕೆರೆಗಳನ್ನು ತುಂಬಿಸಬೇಕು. ಅಲ್ಲದೆ ಈ ಕಾರ್ಯಕ್ಕೆ ಯಾವುದೇ ಅಡೆತಡೆ ಉಂಟಾದಲ್ಲಿ ಪೊಲೀಸ್ ಇಲಾಖೆಯ ಸಹಕಾರ ಪಡೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.
ಈ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಬೇಕು ಹಾಗೂ ಈ ಕಾರ್ಯದ ಮೇಲುಸ್ತುವಾರಿಯನ್ನು ಜಿಲ್ಲೆಯ ಎರಡು ಉಪ ವಿಭಾಗಗಳ ಸಹಾಯಕ ಆಯುಕ್ತರು ಮಾಡಬೇಕೆಂದು ಸೂಚಿಸಲಾಗಿದೆ.
ಕುಡಿಯುವ ನೀರಿನ ಕೆರೆಗಳನ್ನು ತುಂಬಿಸುವ ಮಹತ್ವದ ಕಾರ್ಯಕ್ಕೆ ಯಾವುದೇ ಸಾರ್ವಜನಿಕರು ಅಡ್ಡಪಡಿಸಬಾರದು. ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಿರುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಿಬೇಕೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.





