Raichur | ನೀರಿನ ತೊಟ್ಟಿಗಳ ಸ್ವಚ್ಛತೆಗೆ ಆದ್ಯತೆ ನೀಡಿ, ಸಾಂಕ್ರಾಮಿಕ ರೋಗ ತಡೆಗಟ್ಟಿ: ಡಾ.ಚಂದ್ರಶೇಖರಯ್ಯ ಸ್ವಾಮಿ

ರಾಯಚೂರು: ನೀರಿನ ಟ್ಯಾಂಕ್‌ಗಳು ಹಾಗೂ ಸಿಮೆಂಟ್ ತೊಟ್ಟಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡರೆ ಡೆಂಗ್ಯು, ಚಿಕೂನ್‌ಗುನ್ಯಾ ಸೇರಿದಂತೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಚಂದ್ರಶೇಖರಯ್ಯ ಸ್ವಾಮಿ ಹೇಳಿದರು.
ನವೆಂಬರ್ 18ರಂದು ನಗರದ ನವೋದಯ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಲೇರಿಯಾ ನಿಯಂತ್ರಣ ಘಟಕದ ವತಿಯಿಂದ ಡೆಂಗ್ಯು, ಚಿಕೂನ್‌ಗುನ್ಯಾ ಸೋಂಕು ನಿಯಂತ್ರಣ ಕುರಿತು ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡೆಂಗ್ಯು ಮತ್ತು ಚಿಕೂನ್‌ಗುನ್ಯಾ ರೋಗಗಳು ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತವೆ. ಇವುಗಳನ್ನು ಪ್ರಾಥಮಿಕ ಹಂತದಲ್ಲಿಯೇ ತಡೆಗಟ್ಟಲು ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೊಳಚೆ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ತೊಟ್ಟಿ ಹಾಗೂ ಡ್ರಮ್‌ಗಳಲ್ಲಿ ಹೆಚ್ಚು ದಿನಗಳ ಕಾಲ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಮನೆ ಮುಂದೆ ಗಿಡಗಂಟಿಗಳು ಬೆಳೆದಿದ್ದರೆ ಅವುಗಳನ್ನು ಶೀಘ್ರ ತೆರವುಗೊಳಿಸಬೇಕು. ಮಲಗುವಾಗ ಸೊಳ್ಳೆ ಪರದೆ ಬಳಸಬೇಕು ಹಾಗೂ ಮನೆಗಳ ಕಿಟಕಿಗಳಿಗೆ ಸೊಳ್ಳೆ ಪರದೆ (ಮೆಶ್) ಅಳವಡಿಸಿಕೊಂಡು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಲಹೆ ನೀಡಿದರು.
ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರಲ್ಲಿ ಅರಿವು ಮೂಡಿಸಿದಾಗ ಅವರು ತಮ್ಮ ತಂದೆ-ತಾಯಿ ಮತ್ತು ನೆರೆಹೊರೆಯವರಿಗೂ ತಿಳಿವಳಿಕೆ ನೀಡಲು ಸಾಧ್ಯವಾಗುತ್ತದೆ. ಇದರಿಂದ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ನವೋದಯ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸುತನ ಕುಮಾರಿ ಡಿ., ತಾಂತ್ರಿಕ ಮೇಲ್ವಿಚಾರಕಿ ಸಂಧ್ಯಾ ನಾಯಕ, ಸಿಬ್ಬಂದಿಗಳಾದ ಅನಂತ, ಬಂದೇನವಾಜ್ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.






