ರಾಯಚೂರು | 4,134 ಸರಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮಕ್ಕೆ ಅನುಮತಿ ವಿರೋಧ : ಪ್ರತಿಭಟನೆ

ರಾಯಚೂರು: 4,134 ಆಂಗ್ಲ ಮಾಧ್ಯಮ ಶಾಲೆಗಳನ್ನು, ಕನ್ನಡ ಮಾಧ್ಯಮ ಶಾಲೆಗಳಲ್ಲಿ ತೆರೆಯಲು ಅವಕಾಶ ನೀಡಿದ್ದನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಕನ್ನಡ ಕ್ರಿಯಾ ಸಮಿತಿಯ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಕನ್ನಡ ಶಾಲೆಗಳಲ್ಲಿ 4,134 ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲು ಅವಕಾಶ ನೀಡಿರುವುದು ಖಂಡನೀಯ. ದ್ವಿಭಾಷಾ ಮಾಧ್ಯಮ ಶಾಲೆಗಳಿಗೆ ಅನುಮತಿ ನೀಡಿದಕ್ಕೆ ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಬುಡಕ್ಕೆ ಕೊಡಲಿ ಪೆಟ್ಟು ಬಿದ್ದಂತಾಗಿದೆ. ಕರ್ನಾಟಕದಲ್ಲಿ ಕನ್ನಡ ಶಾಲೆಗಳು ಉಳಿದಿರುವುದೇ ಅಲ್ಪಸ್ವಲ್ಪ ಅದರಲ್ಲೂ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸುತ್ತೆವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡ ಮಿತ್ರ ಕೂಟದ ಸದಸ್ಯ ಅಶೋಕಕುಮಾರ ಜೈನ್, ರಾಮಣ್ಣ ಮ್ಯಾದಾರ, ರಾಮಲಿಂಗಪ್ಪ ಕುಣಸಿ, ಬಶೀರ ಅಹ್ಮದ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.





