ರಾಯಚೂರು | ಕೆಪಿಎಸ್-ಮ್ಯಾಗ್ನೆಟ್ ಯೋಜನೆಯಡಿ ಸರಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ಖಂಡಿಸಿ ಪ್ರತಿಭಟನೆ

ರಾಯಚೂರು : ರಾಜ್ಯ ಸರಕಾರ ಕೆಪಿಎಸ್- ಮ್ಯಾಗ್ನೇಟ್ ಯೋಜನೆಯಡಿ ಸರಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಆರೋಪಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ ವತಿಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ಗಾರ್ಡನ್‌ವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಎಐಡಿಎಸ್ಒ ನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಲ್ಯಾಣ ಕುಮಾರ್ ಮಾತನಾಡಿ, ಕೆಪಿಎಸ್-ಮ್ಯಾಗ್ನೆಟ್ ಯೋಜನೆಯಡಿ ಸರಕಾರಿ ಶಾಲೆಗಳನ್ನು ಮುಚ್ಚದಂತೆ ಕರ್ನಾಟಕ ರಾಜ್ಯ ಸರಕಾರ ರಾಜ್ಯದಲ್ಲಿ 700 ಕೆಪಿಎಸ್- ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದೆ. ಈಗಾಗಲೇ ಈ ಮಾದರಿಯಲ್ಲಿ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಸರಕಾರಿ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ 77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರಕಾರಿ ಪ್ರಾಥಮಿಕ ಶಾಲೆ, 82 ವಿದ್ಯಾರ್ಥಿಗಳಿರುವ ಕನ್ನಿ ದೊಡ್ಡಿ ಶಾಲೆ, 31 ವಿದ್ಯಾರ್ಥಿಗಳಿರುವ ಅಮ್ಮಳ್ಳಿ ದೊಡ್ಡಿ ಶಾಲೆ , 100 ವಿದ್ಯಾರ್ಥಿಗಳಿರುವ ಸಂತೆಮೊಗೇನಹಳ್ಳಿ ಶಾಲೆ, 20 ವಿದ್ಯಾರ್ಥಿಗಳಿರುವ ಮೊಗೇನಹಳ್ಳಿ ದೊಡ್ಡಿ, 80 ವಿದ್ಯಾರ್ಥಿಗಳಿರುವ ಸುಣ್ಣಘಟ್ಟ ಶಾಲೆಗಳನ್ನು ಹೊಂಗನೂರಿನ ಕೆಪಿಎಸ್ ಗೆ ತುರ್ತಾಗಿ ವಿಲೀನಗೊಳಿಸಿ ಕ್ರಮಕೈಗೊಳ್ಳಲು ಆದೇಶ ನೀಡಲಾಗಿದೆ. ಇದು ಖಂಡನಾರ್ಹ ಎಂದು ಹೇಳಿದರು.
ಸರಕಾರದ ಈ ನಿರ್ಧಾರದಿಂದಾಗಿ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ನಮ್ಮ ಊರಿನ ಶಾಲೆಗಳು ಉಳಿಯಬೇಕು ಮತ್ತು ಅವುಗಳನ್ನು ಅಭಿವೃದ್ಧಿಪಡಿಸಿ ಊರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಇದೇ ರೀತಿ 700 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳಡಿ ರಾಜ್ಯದ ಸಾವಿರಾರು ಶಾಲೆಗಳು ವಿಲೀನಗೊಳ್ಳುತ್ತವೆ. ಪ್ರತಿ ಗ್ರಾಮಪಂಚಾಯತಿಗೆ ಒಂದರಂತೆ 5,900 ಕೆಪಿಎಸ್ - ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸುವ ಉದ್ದೇಶವನ್ನು ರಾಜ್ಯ ಸರಕಾರ ಹೊಂದಿದೆ. ಹೀಗಾದಲ್ಲಿ ಸರಕಾರಿ ಪದವಿ ಕಾಲೇಜು ಸೇರಿದಂತೆ 40,000 ಸರಕಾರಿ ಶಾಲೆಗಳು ಮುಚ್ಚಿಹೋಗುವ ಅಪಾಯವಿದೆ ಎಂದು ಹೇಳಿದರು.
ಆರನೇ ತರಗತಿಯಿಂದಲೇ ವೃತ್ತಿ ಶಿಕ್ಷಣವನ್ನು ನೀಡುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ವಿಜ್ಞಾನ, ಗಣಿತ, ಸಮಾಜ ವಿಜ್ಞಾನ ಮತ್ತು ಭಾಷೆ ಸೇರಿದಂತೆ ಮೂಲ ವಿಷಯಗಳ ಜ್ಞಾನಾರ್ಜನೆಗೆ ಇದು ಹೊಡೆತ ನೀಡುತ್ತದೆ. ಶಾಲಾ ನಿರ್ವಹಣೆಯನ್ನು ಹೊರಗುತ್ತಿಗೆಗೆ ನೀಡುವುದು ಮತ್ತು ಶಾಲೆಗಳು ಸ್ವಂತ ಮೂಲದಿಂದ ಆದಾಯವನ್ನು ಸಂಗ್ರಹಿಸುವುದರ ಕುರಿತು ಕೂಡ ಗಮನ ಹರಿಸಲಾಗಿದೆ. ಸಾರ್ವಜನಿಕರ ತೇರಿಗೆಯನ್ನು ಸದ್ವಿನಿಯೋಗಗೊಳಿಸಿ ಸರ್ಕಾರ ಶಿಕ್ಷಣವನ್ನು ಒದಗಿಸಬೇಕು ಮತ್ತು ನಿರಂತರವಾಗಿ ಗುಣಮಟ್ಟವನ್ನು ವೃದ್ಧಿಪಡಿಸಬೇಕು. ಇದರ ಬದಲಿಗೆ ಶಾಲೆಗಳು ಸ್ವಂತ ಮೂಲದಿಂದ ಆದಾಯ ಸಂಗ್ರಹಿಸಬೇಕೆಂಬುದು ಮತ್ತು ಶಾಲಾ ನಿರ್ವಹಣೆಯನ್ನು ಹೊರಗುತ್ತಿಗೆ ನೀಡುವುದು ಸಾರ್ವಜನಿಕ ಶಿಕ್ಷಣದ ಮೂಲ ಆಶಯಗಳಿಗೆ ದಕ್ಕೆ ಉಂಟುಮಾಡುತ್ತದೆ. ರಾಜ್ಯ ಸರ್ಕಾರ ಕೂಡಲೇ ಕೆಪಿಎಸ್-ಮ್ಯಾಗ್ನೆಟ್ ಯೋಜನೆಯನ್ನು ಕೈಬಿಡಬೇಕು ಮತ್ತು ಶಿಕ್ಷಕರ ನೇಮಕಾತಿಯನ್ನು ಖಾತ್ರಿಪಡಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸರಕಾರಿ ಶಾಲೆಗಳನ್ನು ರಕ್ಷಿಸಿ ಬಲಪಡಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, ಜಿಲ್ಲಾ ಕಾರ್ಯದರ್ಶಿ ಬಸವರಾಜ್, ಪದಾಧಿಕಾರಿಗಳಾದ ನಂದಗೋಪಾಲ್, ಶಿವಕುಮಾರ್, ಶ್ರೀಕಾಂತ್ ವಿರೇಶ್, ಸಮೀರ್, ಬಸವರಾಜ್ ಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.







