Raichur | ವಸತಿ ನಿಲಯ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಪದಾಧಿಕಾರಿಗಳು ಸೋಮವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಮಿಕರು, ಜಿಲ್ಲೆಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್‌ಗಳಲ್ಲಿ ಅಡುಗೆ, ಅಡುಗೆ ಸಹಾಯಕ, ಸ್ವಚ್ಛತೆ ಹಾಗೂ ಕಾವಲುಗಾರರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಬಾಕಿ ವೇತನ ಸೇರಿದಂತೆ ಸರ್ಕಾರ ನಿಗದಿಪಡಿಸಿರುವ ಶಾಸನಬದ್ಧ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ಹಲವು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆತಿಲ್ಲ. ಆದ್ದರಿಂದ ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಳೆದ ನಾಲ್ಕು ತಿಂಗಳಿನಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಪಾವತಿಸಬೇಕು. ಮೇ 22ರಿಂದ ಜಾರಿಯಾಗಿರುವ ಪರಿಷ್ಕೃತ ವೇತನವನ್ನು ಕೂಡಲೇ ಅನುಷ್ಠಾನಗೊಳಿಸಿ, ಅದರಂತೆ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದಲ್ಲದೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಹಾಸ್ಟೆಲ್ ಕಾರ್ಮಿಕರಿಗೆ ಏಪ್ರಿಲ್ 2025ರಿಂದ ಕಾರ್ಮಿಕ ಇಲಾಖೆ ಹೆಚ್ಚಳ ಮಾಡಿರುವ ವೇತನವನ್ನು ಪಾವತಿಸದಿರುವ ಎಆರ್‌ಸಿ (ARC) ಏಜೆನ್ಸಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕರಿಗೆ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಶಾಶ್ವತ ವ್ಯವಸ್ಥೆ ರೂಪಿಸಬೇಕು. ಸರ್ಕಾರ ನಿಗದಿಪಡಿಸಿರುವ ವೇತನ ಹಾಗೂ ಇತರೆ ಶಾಸನಬದ್ಧ ಸೌಲಭ್ಯಗಳು ಪ್ರತಿಯೊಬ್ಬ ಕಾರ್ಮಿಕರಿಗೂ ದೊರೆಯುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.






