ರಾಯಚೂರು: ಜ್ಞಾನೇಶ್ ಕುಮಾರ್ ರಾಜೀನಾಮೆ, ಬಂಧನಕ್ಕೆ ಆಗ್ರಹಿಸಿ ಧರಣಿ
ಎಸ್ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ

ರಾಯಚೂರು, ಸೆ.28: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಬಂಧನಕ್ಕೆ ಆಗ್ರಹಿಸಿ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ ಧರಣಿ ನಡೆಯಿತು.
ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಶಾಂತಪ್ಪ ಅಧ್ಯಕ್ಷತೆಯಲ್ಲಿ ನಡೆದ ಧರಣಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಸರಕಾರ, ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಗಳನ್ನು ದಹಿಸಿದರು.
ಎಸ್ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂಬ ಆರೋಪವನ್ನು ಕಾಂಗ್ರೆಸ್ ಮುಖಂಡರು ಮಾಡಿದರು. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು, ಮತದಾರರ ಹಕ್ಕುಗಳನ್ನು ರಕ್ಷಿಸಬೇಕು ಹಾಗೂ ಎಸ್ಐಆರ್ ಕುರಿತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮಾತನಾಡಿ, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಜನರಲ್ಲಿ ಮೂಡಿರುವ ಅನುಮಾನಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು. ಎಸ್ಐಆರ್ ಪ್ರಕ್ರಿಯೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಮತದಾರರ ಹಕ್ಕುಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ್ ಮಾತನಾಡಿ, ಎಸ್ಐಆರ್ ಪ್ರಕ್ರಿಯೆ ಪ್ರಾಮಾಣಿಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು. ಅರ್ಹ ಮತದಾರರು, ದಲಿತರು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂಬ ಆರೋಪಿಸಿದರು
. ಪ್ರಧಾನಿ ನರೇಂದ್ರ ಮೋದಿ ಹಾಗೂ ಆರೆಸ್ಸೆಸ್ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ವಿರೋಧ ಪಕ್ಷಗಳನ್ನು ವ್ಯವಸ್ಥಿತವಾಗಿ ಕಟ್ಟಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.
ವಿನೂತನ ಪ್ರತಿಭಟನೆ
ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಜ್ಞಾನೇಶ್ ಕುಮಾರ್ ಅವರ ಮುಖವಾಡ ಧರಿಸಿ, ಕೈಗೆ ಕೋಳ ಹಾಕಿಕೊಂಡು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮೋದಿ, ಅಮಿತ್ ಶಾ ಹಾಗೂ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಗಳನ್ನು ನಿರ್ಮಿಸಿ ಸಾರ್ವಜನಿಕವಾಗಿ ದಹಿಸಲಾಯಿತು. ಈ ವೇಳೆ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ತೀವ್ರಗೊಳಿಸಿದರು.






