ರಾಯಚೂರು | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಸಾಂದರ್ಭಿಕ ಚಿತ್ರ
ಸಿಂಧನೂರು: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1ಲಕ್ಷ ರೂ. ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
2020ರ ಜನವರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಸ್ಕಿ ತಾಲೂಕಿನ ರತ್ನಾಪುರ ಗ್ರಾಮದ ಸಣ್ಣ ಪಾಮಪ್ಪ ಎಂಬಾತನಿಗೆ ಶಿಕ್ಷೆ ವಿಧಿಸಲಾಗಿದೆ.
ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಸಿಪಿಐ ಬಾಲಚಂದ್ರ ಲಕ್ಕಂ, ಡಿವೈಎಸ್ಪಿ ವಿಶ್ವನಾಥ ರಾವ್ ಅವರು ಸಣ್ಣ ಪಾಮಪ್ಪ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ನ್ಯಾ.ಬಿ.ಬಿ.ಜಕಾತಿಯವರಿದ್ದ ಪೀಠ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
Next Story





