Raichur | ಮಹತ್ವಾಕಾಂಕ್ಷೆ ಜಿಲ್ಲೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ
ಯೋಜನೆ ಪರೀಣಾಮಕಾರಿ ಅನುಷ್ಠಾನಕ್ಕಾಗಿ ಕಾರ್ಯಕ್ಷೇತ್ರ ವೀಕ್ಷಣೆ ಮಾಡಿ: ಉಜ್ವಲ್ ಕುಮಾರ್ ಘೋಷ್

ರಾಯಚೂರು : ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾಲಕಾಲಕ್ಕೆ ಕಾರ್ಯಕ್ಷೇತ್ರಗಳಿಗೆ ಭೇಟಿ ನೀಡಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಬೇಕು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಜಂಟಿ ಕಾರ್ಯದರ್ಶಿ ಹಾಗೂ ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮದ ಕೇಂದ್ರ ಸರ್ಕಾರದ ಪ್ರಭಾರಿ ಜಿಲ್ಲಾ ಉಸ್ತುವಾರಿ ಉಜ್ವಲ್ ಕುಮಾರ್ ಘೋಷ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವಾಕಾಂಕ್ಷಿ ಜಿಲ್ಲೆ ಹಾಗೂ ಬ್ಲಾಕ್ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಮಹತ್ವಾಕಾಂಕ್ಷಿ ಜಿಲ್ಲೆಯಾಗಿರುವ ರಾಯಚೂರು ಸಮಗ್ರ ಅಭಿವೃದ್ಧಿಯಲ್ಲಿ ಗುರಿ ಸಾಧಿಸಬೇಕಾದರೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕೃಷಿ ಮತ್ತು ಜಲಸಂಪನ್ಮೂಲ ಯೋಜನೆಯಡಿ ಸಣ್ಣ ನೀರಾವರಿ ಕಾಮಗಾರಿಗಳು ಹಾಗೂ ಮಣ್ಣು ಪರೀಕ್ಷೆಗಳನ್ನು ಹೆಚ್ಚಿಸಬೇಕು. ಶಾಲೆಗಳಲ್ಲಿ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿರುವುದನ್ನು ಸಂಬಂಧಿತ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಮೂಲಭೂತ ಸೌಕರ್ಯ, ಆರ್ಥಿಕ ಅಭಿವೃದ್ಧಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸೂಚ್ಯಂಕಗಳಲ್ಲಿ ನಿರಂತರ ಪ್ರಗತಿ ಸಾಧಿಸಲು ಇಲಾಖೆ ಮುಖ್ಯಸ್ಥರು ನಿಗಾ ವಹಿಸಿ ಗುರಿ ಸಾಧನೆಗೆ ಆದ್ಯತೆ ನೀಡಬೇಕು ಎಂದರು. ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೃಷಿ, ಆರೋಗ್ಯ, ಶಿಕ್ಷಣ ಹಾಗೂ ಆರ್ಥಿಕ ಸಬಲೀಕರಣ ಕ್ಷೇತ್ರಗಳಲ್ಲಿ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಎಲ್ಲ ಅರ್ಹ ರೈತರಿಗೆ ಬೆಳೆ ವಿಮೆ ಮಾಡಿಸಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿಯಲ್ಲಿ ಜಿಲ್ಲೆಯ ಸಾಧನೆ ಹೆಚ್ಚಿಸಬೇಕು. ಬಿಪಿಎಲ್ ಕುಟುಂಬಗಳಲ್ಲಿ ಈ ಯೋಜನೆ ಕುರಿತು ಜಾಗೃತಿ ಮೂಡಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಕಡಿಮೆ ಫಲಿತಾಂಶ ದಾಖಲಿಸುತ್ತಿರುವ ಶಾಲೆಗಳನ್ನು ಗುರುತಿಸಿ ವಿಶೇಷ ಕಾರ್ಯಯೋಜನೆ ರೂಪಿಸಬೇಕು. ಮಕ್ಕಳ ಅಪೌಷ್ಟಿಕತೆ, ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯ ವಿವಾಹ ತಡೆಗೆ ಸಂಬಂಧಿತ ಇಲಾಖೆಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ರಾಯಚೂರು ಹಲವು ಸೂಚ್ಯಂಕಗಳಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, ಆರೋಗ್ಯ, ಕೃಷಿ, ಶಿಕ್ಷಣ, ಪೌಷ್ಟಿಕತೆ, ಜಲಸಂಪನ್ಮೂಲ, ಕೌಶಲಾಭಿವೃದ್ಧಿ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಗುರಿ ಸಾಧನೆಗೆ ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಮಾತನಾಡಿ, ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಸಂಭಾವನೆ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮಕ್ಕಳ ತಜ್ಞರು, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರು ಹಾಗೂ ಅರಿವಳಿಕೆ ತಜ್ಞರ ನೇಮಕಾತಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶರಣಮ್ಮ ಮಾತನಾಡಿ, ಪೋಷಣ ಅಭಿಯಾನದಡಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯದ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದೆ. ಮಕ್ಕಳ ಅಪೌಷ್ಟಿಕತೆ ಹಾಗೂ ರಕ್ತಹೀನತೆ ನಿವಾರಣೆಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅಂಗನವಾಡಿ ಸಿಬ್ಬಂದಿಯ ಹಾಜರಾತಿಯನ್ನು ಬಯೋಮೆಟ್ರಿಕ್ ಮೂಲಕ ದಾಖಲಿಸುವ ವ್ಯವಸ್ಥೆ ಜಾರಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ ಚೌಹಣ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಅಲಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಧಕ ಸೋಮಶೇಖರಪ್ಪ ಹೋಕ್ರಾಣಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ.ಸುರೇಶ್, ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯ ಜಿಲ್ಲಾ ಕೋ ಆರ್ಡಿನೇಟರ್ ಸೌಮ್ಯ ತಡಕಲ್, ರಂಜೀತ್ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.






