ರಾಯಚೂರು | ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆ

ರಾಯಚೂರು : ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ರೂಪಿಸುವ ಯೋಜನೆಗಳಿಗೆ ಬಿಡುಗಡೆಯಾಗುವ ಅನುದಾನವನ್ನು ಕಾಲಮಿತಿಯಲ್ಲಿ ವೆಚ್ಚ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಡಿ.30ರ ಸೋಮವಾರ ದಂದು ನಗರದ ಜಿಲ್ಲಾ ಪಂಚಾಯತ್ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ʼಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಡಿಸೆಂಬರ್ ತಿಂಗಳಿನ ಅಂತ್ಯದವರೆಗಿನ ಪ್ರಗತಿ ಪರಿಶೀಲನಾ ಸಭೆʼಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೌಲಭ್ಯಗಳನ್ನು ಒದಗಿಸಲು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಿ ಪಟ್ಟಿ ಮಾಡಬೇಕು. ಫಲಾನುಭವಿಗಳಿಗೆ ಆದಷ್ಟು ಶೀಘ್ರವೇ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರತಿ ಇಲಾಖೆಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳಿಗಾಗಿ ಪ್ರತ್ಯೇಕವಾಗಿ ಹಣ ನಿಗದಿಯಾಗುತ್ತದೆ. ಫಲಾನುಭವಿಗಳ ಗುರಿಯೂ ನಿರ್ಧಾರವಾಗಿರುತ್ತದೆ. ವಿಳಂಬವಾಗದೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕು. ಗುರಿಗೆ ಅನುಸಾರ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿಕೊಳ್ಳಬೇಕು. ಈ ಕಾರ್ಯದಲ್ಲಿ ಯಾವುದೇ ಇಲಾಖೆಗಳು ವಿಳಂಬ ಮಾಡಬಾರದು ಎಂದರು.
ಕೆಲವು ಇಲಾಖೆಗಳು ನಿರೀಕ್ಷೆಗೆ ಹಾಗೂ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸುತ್ತಿವೆ. ಬಾಕಿ ಇರಿಸಿಕೊಂಡಿರುವ ಇಲಾಖೆಗಳು ನಿಯಮಾನುಸಾರ ಪ್ರಕ್ರಿಯೆ ಕೈಗೊಳ್ಳಬೇಕು. ಈ ಅನುದಾನವು ಪರಿಶಿಷ್ಟರ ಕಲ್ಯಾಣಕ್ಕೆ ಸದುಪಯೋಗವಾಗುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಮುಂದಿನ ಸಭೆಯ ವೇಳೆಗೆ ಹೆಚ್ಚಿನ ಪ್ರಗತಿ ಸಾಧಿಸಿ ಗುರಿಮುಟ್ಟಲು ಪ್ರಯತ್ನಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೂಚಿತ ಅವಧಿಯೊಳಗೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ತಾಲ್ಲೂಕು ಹಂತದ ಅಧಿಕಾರಿಗಳು ಕಾರ್ಯ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ಸೂಚಿಸಬೇಕು. ವಿಶೇಷ ಸಭೆಗಳನ್ನು ನಡೆಸಿ ನಿರ್ದಿಷ್ಟ ಪಡಿಸಿರುವ ಗುರಿಗೆ ಅನುಗುಣವಾಗಿ ಆದಷ್ಟು ಮೊದಲೇ ಸಾಧನೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಯಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕಾಳಪ್ಪ ಬಡಿಗೇರ, ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್. ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿರೇಶ್ ನಾಯಕ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಲ್ದಾರ್, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀದೇವಿ, ಪಶು ಸಂಗೋಪನಾ ಇಲಾಖೆಯ ನಿರ್ದೇಶಕರಾದ ಅಶೋಕ ಕೋಲಕಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.







