Raichur | ಸಿದ್ದರಾಮಯ್ಯ ಅವರ ಬಜೆಟ್ ಅಭಿವೃದ್ಧಿಗೆ ದಿಕ್ಕು ತೋರಿಸಿದೆ: ಎಂಎಲ್‌ಸಿ ವಸಂತಕುಮಾರ

ರಾಯಚೂರು: ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕ ಸೇರಿದಂತೆ ಬಿಜೆಪಿಯೇತರ ರಾಜ್ಯಗಳ ತಾರತಮ್ಯ ಧೋರಣೆ ತೋರಿಸುತ್ತಿರುವ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27ನೇ ಸಾಲಿನ ಬಜೆಟ್ ಎಲ್ಲಾ ವಲಯಗಳ ಅಭಿವೃದ್ಧಿಗೆ ದಿಕ್ಕು ತೋರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಬಜೆಟ್ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾಗಿರುವ ಸಿದ್ದರಾಮಯ್ಯ ಅವರು ಮಂಡಿಸಿರುವ ಈ ಬಜೆಟ್ ವೈಯಕ್ತಿಕವಾಗಿ ಅವರಿಗೂ ಹಾಗೂ ರಾಜ್ಯದ ಬಜೆಟ್ ಇತಿಹಾಸದಲ್ಲೂ ಮಹತ್ವದ ದಾಖಲೆಯಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರು 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿರುವುದು ಅಪರೂಪದ ಸಾಧನೆ. ಈ ಹಿಂದೆ ಹಾಗೂ ಮುಂದೆಯೂ ಯಾರೂ ಸರಿಗಟ್ಟಲಾಗದಂತಹ ದಾಖಲೆಯನ್ನು ಅವರು ನಿರ್ಮಿಸಿದ್ದಾರೆ ಎಂದು ಶ್ಲಾಘಿಸಿದರು.
ರಾಜ್ಯದ ಜನತೆಯ ಪರವಾಗಿ ಹಾಗೂ ಸದನದ ಪರವಾಗಿ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನಲ್ಲಿ ಕಡಿತ, ವಿಶೇಷ ಅನುದಾನಗಳ ಕೊರತೆ ಹಾಗೂ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ನೀಡದಿರುವುದು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ ಎಂದು ಆರೋಪಿಸಿದರು.
ಇಂತಹ ಕ್ರಮಗಳು ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿದ್ದು ಖಂಡನಾರ್ಹವೆಂದು ಹೇಳಿದರು.
ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ವಿಚಾರಧಾರೆಯನ್ನು ಉತ್ತೇಜಿಸಿ ಯಾವುದೇ ರಾಜಿ ಮಾಡಿಕೊಳ್ಳದೆ ಚಾಣಾಕ್ಷತೆಯಿಂದ ಈ ಬಜೆಟ್ ಮಂಡಿಸಿರುವುದು ಶ್ಲಾಘನೀಯವಾಗಿದೆ ಎಂದು ವಸಂತಕುಮಾರ ಅಭಿಪ್ರಾಯಪಟ್ಟರು.







