Raichur | ಬೀದಿ ನಾಯಿಗಳ ದಾಳಿ ತಡೆಗೆ ಕಠಿಣ ಕ್ರಮ : ಜಿಲ್ಲಾಧಿಕಾರಿ ಪೂವಿತಾ ಎಸ್.

ರಾಯಚೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳಿಂದ ಮಕ್ಕಳು ಹಾಗೂ ಸಾರ್ವಜನಿಕರ ಮೇಲೆ ನಡೆಯುತ್ತಿರುವ ದಾಳಿ ಪ್ರಕರಣಗಳನ್ನು ತಡೆಗಟ್ಟಲು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ತಡೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು ಗಾಯಗೊಂಡಿರುವ ಹಾಗೂ ಕೆಲವು ಪ್ರಕರಣಗಳಲ್ಲಿ ಮಕ್ಕಳ ಸಾವೂ ಸಂಭವಿಸಿರುವ ಹಿನ್ನೆಲೆಯಲ್ಲಿ, ಇಂತಹ ದುರ್ಘಟನೆಗಳು ಮರುಕಳಿಸದಂತೆ ಸಂಬಂಧಿತ ಅಧಿಕಾರಿಗಳು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಬೀದಿ ನಾಯಿಗಳಿಗೆ ಆಹಾರ ಹಾಕುವವರು ಹಾಗೂ ಮಟನ್ ಅಂಗಡಿಗಳ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ನಿಯಮಬಾಹಿರವಾಗಿ ವಿಲೇವಾರಿ ಮಾಡುವವರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಲಾಗುವುದು. ತ್ಯಾಜ್ಯ ಸಾಗಿಸುವ ವಾಹನಗಳು ನಿಯಮ ಉಲ್ಲಂಘಿಸಿದರೂ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಕ್ರೂರ ಅಥವಾ ಅಕ್ರಮಣಕಾರಿ ನಾಯಿಗಳು ಕಂಡುಬಂದರೆ ತಕ್ಷಣ ನೋಡಲ್ ಅಧಿಕಾರಿಗಳು ಪಶುವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ದೊರೆತ ಕೂಡಲೇ ಸಂಬಂಧಿತ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಪ್ರತಿ ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಸಭೆ ನಡೆಸಿ ಬೀದಿ ನಾಯಿಗಳನ್ನು ಗುರುತಿಸುವ ಕಾರ್ಯ ಕೈಗೊಳ್ಳಬೇಕು. ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು, ಮಟನ್ ಅಂಗಡಿಗಳು ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ನಿರಂತರ ನಿಗಾ ವಹಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಬೀದಿ ನಾಯಿಗಳನ್ನು ಹಿಡಿಯುವ ಹಾಗೂ ಅವುಗಳ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಕ್ರಮಗಳನ್ನು ವೈಜ್ಞಾನಿಕ ಹಾಗೂ ವ್ಯವಸ್ಥಿತ ರೀತಿಯಲ್ಲಿ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಅನುಸಾರ ಕೈಗೊಳ್ಳಬೇಕು. ಸಾರ್ವಜನಿಕರು ಬೀದಿ ನಾಯಿಗಳಿಗೆ ಆಹಾರ ನೀಡದಂತೆ ಜಾಗೃತಿ ಮೂಡಿಸಬೇಕು ಹಾಗೂ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಪೂವಿತಾ ಎಸ್. ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹೊಪಾತ್ರ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಹರೀಶ್, ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಪೋಮ್ ಸಿಂಗ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನಂದಿತಾ ಎಮ್.ಎನ್., ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ತಿಮ್ಮಪ್ಪ ಬಿರಾದಾರ್, ರಾಯಚೂರು ತಹಶಿಲ್ದಾರ್ ಸುರೇಶ ವರ್ಮಾ, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,
ಪಶು ಸಂಗೋಪನೆ ಇಲಾಖೆಯ ವಿವಿಧ ತಾಲೂಕಿನ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.






