ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮಿಸೋಣ: ನೂತನ ಜಿಲ್ಲಾಧಿಕಾರಿ ಪೂವಿತಾ ಎಸ್.

ರಾಯಚೂರು: ರಾಯಚೂರು ಜಿಲ್ಲೆಯ ಅಭಿವೃದ್ಧಿಗೆ ವಿವಿಧ ಇಲಾಖೆಯ ಎಲ್ಲಾ ಅಧಿಕಾರಿಗಳು ಒಟ್ಟಾಗಿ ಶ್ರಮಿಸೋಣ ಎಂದು ರಾಯಚೂರು ನೂತನ ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.
ಅವರು ಗುರುವಾರ ಜಿಲ್ಲಾಡಳಿತ ರಾಯಚೂರು ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಜಿಲ್ಲಾಧಿಕಾರಿ ಪೂವಿತಾ ಎಸ್. ಅವರಿಗೆ ಸ್ವಾಗತ ಹಾಗೂ ನಿರ್ಗಮಿತ ಜಿಲ್ಲಾಧಿಕಾರಿ ನಿತೀಶ್. ಕೆ. ಅವರಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಿರ್ಗಮಿತ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಿ ನಮಗೆ ದಾರಿ ಸುಲಭವಾಗಿ ಮಾಡಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ದಾರಿಯಲ್ಲಿ ನಾವೆಲ್ಲರೂ ಸಾಗೋಣ ಎಂದು ಹೇಳಿದರು.
ನಿರ್ಗಮಿತ ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಮಾತನಾಡಿ, ರಾಯಚೂರು ಜಿಲ್ಲೆಗೆ ಬರುವ ಮುಂಚೆ ಅನೇಕ ತಪ್ಪು ಕಲ್ಪನೆಗಳಿದ್ದವು. ಇಲ್ಲಿ ಪ್ರಾಮಾಣಿಕವಾಗಿ ಕಷ್ಟ ಪಟ್ಟು ಕೆಲಸ ಮಾಡಿದರೆ ಜನರು, ಜನಪ್ರತಿನಿಧಿಗಳು ಹಾಗೂ ಸಂಘಟನೆಗಳು ನಮಗೆ ಬಹಳ ಪ್ರೀತಿ ಮತ್ತು ಕಾಳಜಿಯನ್ನು ತೋರುತ್ತಾರೆ. ಬೇರೆ ಜಿಲ್ಲೆಗೆ ಹೋಲಿಸಿದರೆ ರಾಯಚೂರು ಜಿಲ್ಲೆಯಲ್ಲಿ ಬಹಳಷ್ಟು ಹೆಸರು ಮತ್ತು ಕೆಲಸ ಮಾಡಬಹುದು. ನನ್ನ 2 ವರ್ಷಗಳ ಅವಧಿಯಲ್ಲಿ ಜಿಲ್ಲೆಯ ಸಚಿವರು, ಶಾಸಕರು ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲು ಒಳ್ಳೆಯ ರೀತಿಯಲ್ಲಿ ಸಹಕಾರ ನೀಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಕೆಲಸ ಮಾಡಿದರೆ ಭಾರತ ದೇಶದಲ್ಲಿ ಎಲ್ಲಿ ಬೇಕಾದರು ಕೆಲಸ ಮಾಡಬಹುದು. ಜಿಲ್ಲೆಯಲ್ಲಿ ಕೆಲಸ ಮಾಡಲು ನನಗೆ ಸಹಕಾರ ನೀಡಿದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ನನ್ನಂತೆ ನೂತನ ಜಿಲ್ಲಾಧಿಕಾರಿಗಳಿಗೆ ಸಹಕಾರ ನೀಡಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ. ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೋಹಪಾತ್ರ. ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ ಹಾಗೂ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಮಾತನಾಡಿದರು.
ನೂತನ ಹಾಗೂ ನಿರ್ಗಮಿತ ಜಿಲ್ಲಾಧಿಕಾರಿಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಅವರು ಸನ್ಮಾನಿಸಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ. ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೋಹಪಾತ್ರ. ಸಹಾಯಕ ಆಯುಕ್ತರಾದ ಹಂಪಣ್ಣ ಸಜ್ಜನ. ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಈರಣ್ಣ ಬಿರಾದಾರ. ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೃಷ್ಣ ಶಾವಂತಗೇರಾ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಂದ್ರ ಬಾಬು ಉಪಸ್ಥಿತರಿದ್ದರು.






