Raichur | ಪ್ರಾಮಾಣಿಕ ಪತ್ರಿಕೋದ್ಯಮದಿಂದಲೇ ವೃತ್ತಿಗೆ ಗೌರವ: ಎನ್.ಎಸ್. ಭೋಸರಾಜು

ರಾಯಚೂರು : ಪತ್ರಕರ್ತರು ಸಮಾಜದ ಬಗ್ಗೆ ಪ್ರಾಮಾಣಿಕ ಕಳಕಳಿ ಹೊಂದಿ, ಜನಪರ ಧೋರಣೆಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ ಗೌರವ ದೊರೆಯುತ್ತದೆ ಎಂದು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜು ಹೇಳಿದರು.
ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸುದ್ದಿ ಮಾಧ್ಯಮ ಸಮಾಜದ ನ್ಯೂನತೆಗಳನ್ನು ತಿದ್ದುವ ಪ್ರಬಲ ಅಸ್ತ್ರವಾಗಿದೆ. ಸಮಾಜದ ಬಗ್ಗೆ ಕಾಳಜಿ ಇಲ್ಲದ ಪತ್ರಿಕೋದ್ಯಮಕ್ಕೆ ಜನಮನ್ನಣೆ ಸಿಗುವುದಿಲ್ಲ. ಮಹಾತ್ಮ ಗಾಂಧೀಜಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಿ.ವಿ. ಗುಂಡಪ್ಪ ಅವರಂತಹ ಮಹನೀಯರು ಪತ್ರಿಕೆಯನ್ನು ಸಮಾಜ ಪರಿವರ್ತನೆಯ ಸಾಧನವಾಗಿ ಬಳಸಿಕೊಂಡು ಪತ್ರಿಕೋದ್ಯಮದ ಮೌಲ್ಯ ಹೆಚ್ಚಿಸಿದ್ದಾರೆ ಎಂದು ಹೇಳಿದರು.
ಪತ್ರಕರ್ತರು ಯಾರ ವೈಯಕ್ತಿಕ ತೇಜೋವಧೆ ಮಾಡುವುದಕ್ಕಿಂತ ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗಬೇಕು. ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗೆ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪತ್ರಕರ್ತರ ಸಮಸ್ಯೆಗಳನ್ನು ಹಂತಹಂತವಾಗಿ ಸರ್ಕಾರದ ಮಟ್ಟದಲ್ಲಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಪತ್ರಕರ್ತರೇ ಸಮಾಜಕ್ಕೆ ಅಗತ್ಯ. ಪತ್ರಿಕೋದ್ಯಮವನ್ನು ವೈಯಕ್ತಿಕ ಉದ್ದೇಶಗಳಿಗೆ ಬಳಸಿಕೊಳ್ಳದೆ ವೃತ್ತಿಯ ಘನತೆ ಕಾಪಾಡಬೇಕು. ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗುವವರನ್ನು ಸಂಘದಿಂದ ಹೊರಗಿಡಬೇಕು ಎಂದು ಹೇಳಿದರು.
ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ್ ಸಿಂಗ್ ಮಾತನಾಡಿ, ರಾಯಚೂರಿನ ಪತ್ರಕರ್ತರಿಗೆ ರಾಜ್ಯದಲ್ಲಿ ವಿಶೇಷ ಗೌರವವಿದೆ. ಪತ್ರಕರ್ತರು ತಮ್ಮ ವೃತ್ತಿಯನ್ನು ಗೌರವದಿಂದ ಕಾಣಬೇಕು. ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್. ಗುರುನಾಥ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಪತ್ರಕರ್ತರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ರಾಯಚೂರಿನಲ್ಲಿ ನಡೆಯಲಿರುವ 41ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಲು ಎಲ್ಲರ ಸಹಕಾರ ಕೋರಿದರು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಹಲವಾರು ಪತ್ರಕರ್ತರಿಗೆ ಜೀವಮಾನ ಸಾಧನೆ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ರಂಗನಾಥ ಚಕ್ರವರ್ತಿ, ಶಿವಮೂರ್ತಿ ಹಿರೇಮಠ, ವಿರೇಶ ಸೌದ್ರಿ ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ರಾಮಕೃಷ್ಣ ದಾಸರಿ, ಚಂದಪ್ಪ ದೋರನಹಳ್ಳಿ, ಸುರೇಶಗೌಡ, ಹನುಮಂತ ಕನ್ನಾಳ, ರಾಜಶೇಖರ, ಆದೇಶ ನಗನೂರು, ಈಶಪ್ಪ ಬೈಲ್‌ಮರ್ಚೆಡ್, ಬದ್ರಿನಾಥ, ಬೀರಪ್ಪ, ಶಿವಕುಮಾರ್, ಮಂಜುನಾಥ ಎತ್ತಿನಮಾಳಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಮತ್ತು ಮಂಜುನಾಥ ಸಾಲಿ, ವಾಗೀಶ್ ಪಂಡಿತರಾಧ್ಯ, ಗೌಡಪ್ಪ ಗೌಡ, ಶಶಿಧರ ಅಂಗಡಿ, ಖಾಜಾ ಹುಸೇನ್, ದುರುಗೇಶ, ವಾಸುದೇವ ಎಸ್. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ವಾರ್ಷಿಕ ಪ್ರಶಸ್ತಿ ನೀಡಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಪತ್ರಿಕೋದ್ಯಮ ಕ್ಷೇತ್ರದ ಭೀಷ್ಮ ಡಿ.ವಿ. ಗುಂಡಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಮಾನವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ರಾಯಚೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಜಿ.ಸುರೇಶ್, ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ ಕರೆಗೂಡು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿಯ ಸದಸ್ಯರಾದ ಅರವಿಂದ್ ಕುಲಕರ್ಣಿ, ಬಸವರಾಜ ನಾಗಡದಿನ್ನಿ, ಜಿಲ್ಲಾ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಚನ್ನಬಸವ, ಕಲಬುರಗಿ ಜಿಲ್ಲಾಧ್ಯಕ್ಷರಾದ ಬಾಬುರಾವ್ ಯಡ್ರಾಮಿ ಸೇರಿದಂತೆ ಜಿಲ್ಲಾ ಸಮಿತಿಯ ವಿವಿಧ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರು, ಕಾರ್ಯದರ್ಶಿಗಳು, ಹಿರಿಯ ಪತ್ರಕರ್ತರು, ಯುವ ಪತ್ರಕರ್ತರು ಸೇರಿದಂತೆ ಇತರರು ಇದ್ದರು.






