Raichur | ಹರವಿ, ಹಿರೇಹಣಗಿ, ಕವಿತಾಳ ಪಟ್ಟಣಕ್ಕೆ ಉಜ್ವಲ್ ಕುಮಾರ ಭೇಟಿ; ಕಾಮಗಾರಿಗಳ ಪರಿಶೀಲನೆ

ರಾಯಚೂರು : ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ವಾಣಿಜ್ಯ ವಿಭಾಗದ ಜಂಟಿ ಕಾರ್ಯದರ್ಶಿ ಹಾಗೂ ಸಂಪೂರ್ಣತಾ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಜಿಲ್ಲಾ ಪ್ರಭಾರಿ ಉಜ್ವಲ್ ಕುಮಾರ್ ಘೋಷ್ ಅವರು ಸೋಮವಾರ ಸಿರವಾರ ತಾಲ್ಲೂಕಿನ ಹರವಿ, ಹಿರೇಹಣಗಿ ಮತ್ತು ಕವಿತಾಳಕ್ಕೆ ಭೇಟಿ ನೀಡಿ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನವನ್ನು ಪರಿಶೀಲಿಸಿದರು.
ಮೊದಲಿಗೆ ಹರವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಗರ್ಭಿಣಿಯರು ಹಾಗೂ ಗ್ರಾಮೀಣ ಮಹಿಳೆಯರ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಡಿ ಗರ್ಭಿಣಿಯರ ತಪಾಸಣೆ, ಹೆರಿಗೆ ಕೊಠಡಿ, ವಾರ್ಡ್, ಪ್ರಯೋಗಾಲಯ ಹಾಗೂ ದಾಖಲೆ ನಿರ್ವಹಣೆಯನ್ನು ಪರಿಶೀಲಿಸಿ, ಅಧಿಕ ರಕ್ತದೊತ್ತಡ ನಿಯಂತ್ರಣ ಕುರಿತು ಪರಿಣಾಮಕಾರಿ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುವಂತೆ ತಿಳಿಸಿದರು.
ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಪೌಷ್ಟಿಕ ಮಕ್ಕಳ ಮೇಲ್ವಿಚಾರಣೆ, ಮೊಟ್ಟೆ ಹಾಗೂ ಪೌಷ್ಟಿಕ ಆಹಾರ ವಿತರಣೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕಾಂಶ ಒದಗಿಸುವ ವ್ಯವಸ್ಥೆಯನ್ನು ಪರಿಶೀಲಿಸಿದರು. ಮಕ್ಕಳ ಹಾಜರಾತಿ ಹಾಗೂ ಅಂಗನವಾಡಿ ಕೇಂದ್ರದ ಮೂಲಸೌಕರ್ಯ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹರವಿಯಲ್ಲಿ ನಡೆಯುತ್ತಿರುವ ವಿಬಿಜಿ-ರಾಮ್ ಜಿ ಯೋಜನೆಯ ನಾಲಾ ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿ, ಕೂಲಿಕಾರರೊಂದಿಗೆ ಸಂವಾದ ನಡೆಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 125 ದಿನಗಳ ಕೆಲಸ ನೀಡುವ ಉದ್ದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸೂಚಿಸಿದರು. ಈ ವೇಳೆ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಹಾಗೂ ಕಾಲುವೆ ಹೂಳೆತ್ತಲು ಯಂತ್ರ ಬಳಕೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.
ಹಿರೇಹಣಗಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮನೆ-ಮನೆಗೆ ನಳ ಸಂಪರ್ಕ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಪರಿಶೀಲಿಸಿ, ಗ್ರಾಮಸ್ಥರಿಂದ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದುಕೊಂಡರು.
ನಂತರ ಕವಿತಾಳದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಗಣಿತ ವಿಷಯ ಬೋಧನೆ ನಡೆಸಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಬಿಸಿಯೂಟ, ಮೊಟ್ಟೆ ಹಾಗೂ ಹಾಲು ವಿತರಣೆ ಕುರಿತು ಮಾಹಿತಿ ಪಡೆದರು.
ಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್ (ATL) ನಲ್ಲಿ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ಸೆನ್ಸರ್, ಕ್ಯೂಆರ್ ಕೋಡ್, ಸ್ಮಾರ್ಟ್ ವಿದ್ಯಾಲಯ, ಮೆಕಾನಿಕಲ್ ಮಾದರಿಗಳು ಹಾಗೂ 3ಡಿ ಪ್ರಿಂಟರ್ ಯೋಜನೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ, ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






