Raichur | ಕುಡಿಯುವ ನೀರಿಗಾಗಿ ಮಸ್ಕಿ ತಾಪಂ ಕಚೇರಿಗೆ ಗ್ರಾಮಸ್ಥರ ಮುತ್ತಿಗೆ

ಮಸ್ಕಿ : ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತುಪ್ಪದೂರು ಗ್ರಾಮದ ಜನರು ಮಸ್ಕಿ ತಾಲೂಕು ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿದರು.
ಮಸ್ಕಿ ತಾಲೂಕಿನ ಅಮೀನಗಡ ಗ್ರಾಪಂ ವ್ಯಾಪ್ತಿಯ ತುಪ್ಪದೂರು ಗ್ರಾಮದಲ್ಲಿ ಎರಡು ತಿಂಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ಕುಡಿಯುವ ಹಾಗೂ ದೈನಂದಿನ ಬಳಕೆಯ ನೀರಿಗಾಗಿ ದೂರದ ಪ್ರದೇಶಗಳಿಗೆ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ನೀರಿನ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ಹಲವು ಬಾರಿ ತಂದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.
ಕೂಡಲೇ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಜನರ ಮೂಲಭೂತ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮಸ್ಥರ ಅಹವಾಲು ಆಲಿಸಿದ ಅಧಿಕಾರಿಗಳು, ಸಮಸ್ಯೆ ಪರಿಹಾರಕ್ಕೆ ಕೈಗೊಳ್ಳಲಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.




