Raichur | ಯಲಗಟ್ಟ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕಲು ಮಹಿಳೆಯರ ಆಗ್ರಹ

ರಾಯಚೂರು: ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಸುಮಾರು 12 ಕಡೆ ಅನಧಿಕೃತವಾಗಿ ಸಾರಾಯಿ ಮಾರಾಟ ಮಾಡಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮದ ಮಹಿಳೆಯರು ರಾಯಚೂರಿನ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.
ಯಲಗಟ್ಟ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟದಿಂದ ಕೌಟುಂಬಿಕ ಕಲಹಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ವಿಶೇಷವಾಗಿ ದುಡಿಯುವ ವರ್ಗದ ಕುಟುಂಬಗಳು ತೊಂದರೆ ಅನುಭವಿಸುತ್ತಿವೆ. ಯುವಕರು ಕೆಲಸಕ್ಕೆ ತೆರಳದೆ, ದುಡಿದ ಹಣವನ್ನು ಮದ್ಯ ಸೇವನೆಗೆ ವ್ಯಯಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟದಿಂದ ಹಲವು ಕುಟುಂಬಗಳ ನೆಮ್ಮದಿ ಹಾಳಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಕ್ರಮ ಮದ್ಯ ಮಾರಾಟದ ಅಡ್ಡೆಗಳ ಮೇಲೆ ದಾಳಿ ನಡೆಸಿ, ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಹೋರಾಟಗಾರ ಶಿವಕುಮಾರ ಯಾದವ್, ನಾಗಮ್ಮ, ಬಾಳಮ್ಮ, ನರಸಮ್ಮ, ಯಲ್ಲಮ್ಮ, ಶಂಕ್ರಮ್ಮ, ಭಾಗ್ಯಮ್ಮ, ಅಂಬಮ್ಮ, ವಿಜಯಲಕ್ಷ್ಮೀ, ಅಕ್ಕಮ್ಮ ಸೇರಿದಂತೆ ಗ್ರಾಮದ ಮಹಿಳೆಯರು ಪಾಲ್ಗೊಂಡಿದ್ದರು.






