ರಾಯಚೂರು | ವಿಶ್ವ ಜನಸಂಖ್ಯಾ ದಿನಾಚರಣೆ: ಜನಜಾಗೃತಿ ಜಾಥಾಕ್ಕೆ ಡಿಎಚ್‌ಓ ಡಾ.ಸುರೇಂದ್ರ ಬಾಬು ಚಾಲನೆ

ರಾಯಚೂರು: ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ನಗರದಲ್ಲಿ ಶುಕ್ರವಾರ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು ಚಾಲನೆ ನೀಡಿದರು.
ಮಹಿಳೆಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ಥಿರತೆಯು ತಾಯ್ತನಕ್ಕೆ ಸರಿಯಾದ ವಯಸ್ಸು ಎಂಬ ಘೋಷವಾಕ್ಯದೊಡನೆ ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ ರಾಯಚೂರು, ರಿಮ್ಸ್ ಭೋಧಕ ಆಸ್ಪತ್ರೆ, ಎಸ್.ಕೆ.ಇ. ಪ್ಯಾರಾ ಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಬಳಿ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಸುಖದಿಂದ ಸಂಸಾರ ನಡೆಸಲು ಎರಡು ಮಕ್ಕಳು ಸಾಕು. ಇದರಿಂದ ಗುಣಮಟ್ಟದ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗುತ್ತದೆ. ಜೊತೆಗೆ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.
ಜನಜಾಗೃತಿ ಜಾಥಾವು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಶುರುವಾಗಿ ಭಗತ್‍ಸಿಂಗ್ ವೃತ್ತದ ಮಾರ್ಗವಾಗಿ ತಿನ್‍ಕಂದಿಲ್, ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮೂಲಕ ಮಹಾವಿರ ವೃತ್ತದವರೆಗೆ ಸಾಗಿತು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಕುಮಾರ, ರಿಮ್ಸ್ ಕಾಲೇಜಿನ ಪ್ರಾಚಾರ್ಯ ಡಾ.ರಾಹುಲ್, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಂ.ಡಿ.ಶಾಕೀರ್, ಡಾ.ಗಣೇಶ್, ರಾಯಚೂರು ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಸೇರಿದಂತೆ ಆಶಾ ಕಾರ್ಯಕರ್ತರು ಇದ್ದರು.







