ರಾಯಚೂರು : ಯುವತಿ ಕೊಲೆ ಪ್ರಕರಣ; ಕಠಿಣ ಕ್ರಮಕ್ಕೆ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಸೂಚನೆ

ರಾಯಚೂರು : ಜಿಲ್ಲೆಯ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಯುವತಿಯ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಜಯ್ ಸಿಂಗ್ ಅವರು ತಿಳಿಸಿದ್ದಾರೆ.
ಘಟನೆಯ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆಗೆ ತಕ್ಷಣವೇ ದೂರವಾಣಿ ಮುಖಾಂತರ ಮಾತನಾಡಿ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದು, ಈಗಾಗಲೇ ಪ್ರಕರಣ ದಾಖಲಾಗಿದ್ದು, ಮೂರು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಈ ಪ್ರಕರಣವು ಅತ್ಯಂತ ಅಮಾನವೀಯ ಘಟನೆಯಾಗಿದ್ದು, ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತ ಯುವತಿಯ ಪಾಲಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯುವತಿಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದ್ದು, ಸರ್ಕಾರ ಸದಾ ಬೆಂಬಲಕ್ಕಿದೆ. ದುಷ್ಕರ್ಮಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಸಂಪೂರ್ಣ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಾಗಿ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಾ, ಮುಂದೆ ಜಿಲ್ಲೆಯಲ್ಲಿ ಇಂತಹ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ವಿಧಾನಸಭೆ ಅಧಿವೇಶನ ಹಾಗೂ ವಿಧಾನ ಪರಿಷತ್ತಿನ ಅಧಿವೇಶನ ನಿಮಿತ್ತ ಬರಲು ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಗ್ರಾಮಕ್ಕೆ ಭೇಟಿ ನೀಡುವುದಾಗಿ ತಿಳಿಸಿದ ಸಚಿವರು, ಸಂತ್ರಸ್ತೆಯ ಕುಟುಂಬದೊಂದಿಗೆ ಸರ್ಕಾರ ಮತ್ತು ಜಿಲ್ಲಾಡಳಿತ ಇದೆ ಎಂದು ಅಭಯ ನೀಡಿದ್ದು, ಸರ್ಕಾರದಿಂದ ದೊರಕುವ ಸವಲತ್ತುಗಳನ್ನು ಕೊಡಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರಂ ಸಿಂಗ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






