ರಾಯಚೂರಿನ ತಹಶೀಲ್ದಾರ್ ಕಚೇರಿಯಲ್ಲಿ ಸರಳವಾಗಿ ಕಂದಾಯ ದಿನ ಆಚರಣೆ

ರಾಯಚೂರು : ಕಂದಾಯ ದಿನದ ಅಂಗವಾಗಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ಸಿಬ್ಬಂದಿಗೆ ಸಿಹಿ ಹಂಚುವ ಮೂಲಕ ಸರಳವಾಗಿ ಆಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಸುರೇಶ ವರ್ಮಾ, ಸ್ವಾತಂತ್ರ್ಯ ಪೂರ್ವದಿಂದಲೂ ಹಾಗೂ ಸ್ವಾತಂತ್ರ್ಯಾನಂತರವೂ ಕಂದಾಯ ಇಲಾಖೆ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಜನಸಾಮಾನ್ಯರೊಂದಿಗೆ ನಿಕಟ ಸಂಪರ್ಕ ಹೊಂದಿ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಅವಕಾಶ ಕಂದಾಯ ಇಲಾಖೆ ಸಿಬ್ಬಂದಿಗೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ಇಲಾಖೆ ಇನ್ನಷ್ಟು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಬಹುತೇಕ ಯೋಜನೆಗಳು ತಾಂತ್ರಿಕ ವ್ಯವಸ್ಥೆಯನ್ನು ಆಧರಿಸಿವೆ. ಆದ್ದರಿಂದ ಸಾರ್ವಜನಿಕರೂ ತಾಂತ್ರಿಕ ಸೌಲಭ್ಯಗಳನ್ನು ಬಳಸಿಕೊಂಡು ಸರ್ಕಾರಿ ಸೇವೆಗಳ ಪ್ರಯೋಜನ ಪಡೆಯಲು ಮುಂದಾಗಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಕಚೇರಿಯ ಹಿರಿಯ ಅಧಿಕಾರಿಗಳು, ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.




