Sindhanur | ಜು.11ರಂದು ಬೆಂಗಳೂರಿನಲ್ಲಿ ‘ನಮ್ಮ ಅಭಿಮಾನದ ಅಭಿನಂದನೆ’ ಕಾರ್ಯಕ್ರಮ : ಚಂದ್ರಶೇಖರ ಹಿರೇಮಠ

ಸಿಂಧನೂರು: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರಿಗೆ ಜುಲೈ 11ರಂದು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಗುವುದು ಎಂದು ಸಂಘದ ವಿಭಾಗೀಯ ಉಪಾಧ್ಯಕ್ಷ ಹಾಗೂ ಸಿಂಧನೂರು ತಾಲೂಕು ಅಧ್ಯಕ್ಷ ಚಂದ್ರಶೇಖರ ಹಿರೇಮಠ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ‘ನಮ್ಮ ಅಭಿಮಾನದ ಅಭಿನಂದನೆ’ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದೆ. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಹಳೇ ಪಿಂಚಣಿ ಯೋಜನೆ ಮರುಜಾರಿಗೆ ಸಂಬಂಧಿಸಿದಂತೆ ಸರ್ಕಾರ ರಚಿಸಿದ್ದ ಸಮಿತಿಯ ವರದಿಯನ್ನು ಶೀಘ್ರ ಪಡೆದು ಸಚಿವ ಸಂಪುಟದಲ್ಲಿ ಚರ್ಚಿಸಿ ಅನುಷ್ಠಾನಗೊಳಿಸಬೇಕು ಎಂದು ಮನವಿ ಸಲ್ಲಿಸಲಾಗುವುದು. 2006ರ ನಂತರ ನೇಮಕಗೊಂಡ ರಾಜ್ಯ ಸರ್ಕಾರಿ ನೌಕರರ ಹಿತಾಸಕ್ತಿಯನ್ನು ಕಾಪಾಡಬೇಕು ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ದೊರೆಯುವ ವೇತನ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ವಿಸ್ತರಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಹಿರೇಮಠ ಮನವಿ ಮಾಡಿದ್ದಾರೆ.






