ಸಿಂಧನೂರು | ಸಿಎಂ ಆಗಮನ ಹಿನ್ನಲೆ : ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ, ಎಸ್ಪಿ ಭೇಟಿ

ಸಿಂಧನೂರು : ತಾಲ್ಲೂಕಿನ ಸಿದ್ದಪರ್ವತ ಅಂಬಾದೇವಿ ದೇವಸ್ಥಾನದ ಜಾತ್ರಾಮಹೋತ್ಸವಕ್ಕೆ ಜನವರಿ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಸಚಿವರ ಆಗಮನದ ಹಿನ್ನಲೆ ಶುಕ್ರವಾರ ಅಂಬಾಮಠಕ್ಕೆ ಜಿಲ್ಲಾಧಿಕಾರಿ ನಿತೀಶ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಜಾತ್ರಾ ಮಹೋತ್ಸವದ ಹಿನ್ನಲೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಲು ಸೂಚಿಸಿದರು. ಜಾತ್ರಾ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಸರ್ಕಾರದ ಸಚಿವರು ಆಗಮಿಸಲಿದ್ದು, ವೇದಿಕೆ ನಿರ್ಮಾಣ, ಕಾರ್ಯಕ್ರಮದ ಸಿದ್ಧತೆ ಹಾಗೂ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.
ನಂತರ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯಲ್ಲಿ ಅನಾನುಕೂಲಯಾಗದಂತೆ ನೋಡಿಕೊಳ್ಳಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಬೇಕು. ಲೋಪ ಕಂಡುಬಂದರೆ ಅಂತಹವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದು, ತಹಶೀಲ್ದಾರ್ ಅರುಣ್ ಹೆಚ್.ದೇಸಾಯಿ, ತಾ.ಪಂ. ಇಒ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ಅಂಬಾಮಠ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಂಗನಗೌಡ ಗೊರೇಬಾಳ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.







