ಸಿಂಧನೂರು | ನೀಟ್ ಅಕ್ರಮದ ವಿರುದ್ಧ ಹೋರಾಟ, ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ

ಸಿಂಧನೂರು: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಅಕ್ರಮದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ವರ್ಷಗಳ ಪರಿಶ್ರಮದಿಂದ ಪರೀಕ್ಷೆಗೆ ಸಿದ್ಧರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಲಕ್ಷಾಂತರ ರೂಪಾಯಿಗೆ ಮಾರಾಟ ನಡೆದಿರುವ ಗಂಭೀರ ಆರೋಪಗಳಿದ್ದರೂ ಕೇಂದ್ರ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ನ್ಯಾಯಕ್ಕಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆಯೇ ಬಲಪ್ರಯೋಗ ನಡೆಸಿರುವುದು ಖಂಡನೀಯ. ಇದು ಕೇವಲ ವಿದ್ಯಾರ್ಥಿಗಳ ಮೇಲಿನ ದಾಳಿಯಲ್ಲ, ಪ್ರಜಾಪ್ರಭುತ್ವದ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ದೆಹಲಿಯ ಲಾಠಿಚಾರ್ಜ್ ಪ್ರಕರಣದ ಕುರಿತು ಸ್ವತಂತ್ರ ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಘಟನೆಯ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹಾಗೂ ನೀಟ್ ಪರೀಕ್ಷಾ ವ್ಯವಸ್ಥೆಯನ್ನು ರದ್ದುಗೊಳಿಸಿ, ಅರ್ಹತಾ ಪರೀಕ್ಷೆಗಳನ್ನು ನಡೆಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು. ನೀಟ್ ಅಕ್ರಮದಿಂದ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಘೋಷಿಸಬೇಕು. ಪ್ರವೇಶ ಹಾಗೂ ನೇಮಕಾತಿ ಪರೀಕ್ಷೆಗಳನ್ನು ನ್ಯಾಯಯುತ ಮತ್ತು ಪಾರದರ್ಶಕವಾಗಿ ನಡೆಸುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಶಿಕ್ಷಣದ ಖಾಸಗೀಕರಣ, ಕಾರ್ಪೊರೇಟೀಕರಣ ಮತ್ತು ಕೇಸರೀಕರಣವನ್ನು ತಡೆದು ಸಮಾನ ಶಿಕ್ಷಣ ನೀತಿಯನ್ನು ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖರಾದ ಡಿ.ಎಚ್.ಕಂಬಳಿ, ಚಂದ್ರಶೇಖರ ಗೊರಬಾಳ, ಬಸವಂತರಾಯಗೌಡ ಕಲ್ಲೂರು, ಎನ್.ರಾಮಯ್ಯ ಜವಳಗೇರಾ, ನಾಗರಾಜ ಪೂಜಾರ್, ಬಸವರಾಜ ಬೆಳಗುರ್ಕಿ, ಬಸವರಾಜ ಬಾದರ್ಲಿ, ವಿರುಪಮ್ಮ, ಬಸವಲಿಂಗಪ್ಪ ಬಾದರ್ಲಿ, ಹುಸೇನ್‌ಸಾಬ, ಡಾ.ವಸಿಂ ಅಹ್ಮದ್, ಅಶೋಕ ನಂಜಲದಿನ್ನಿ, ಚಂದ್ರಶೇಖರ ಹರಟೆನೂರು, ಡಾ.ಅರುಣಕುಮಾರ ಬರ‍್ಗಿ, ಡಾ.ಬಸವರಾಜ ನಾಯಕ, ಅಮೀನ್‌ಸಾಬ ನದಾಫ್ ಇದ್ದರು.






