Sindhnur | ವೈದ್ಯರ ನಿರ್ಲಕ್ಷ್ಯ ಆರೋಪ : ಚಿಕಿತ್ಸೆ ಬಳಿಕ ವ್ಯಕ್ತಿ ಮೃತ್ಯು

ಸಿಂಧನೂರು: ತಾಲೂಕಿನ ತುರ್ವಿಹಾಳದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದ ಕೆಲವೇ ಗಂಟೆಗಳಲ್ಲಿ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿರುವ ಘಟನೆ ಶುಕ್ರವಾರ ನಡೆದಿದೆ.
ಹತ್ತಿಗುಡ್ಡ ಗ್ರಾಮದ ಗುರುನಾಥ ಹುಲುಗಪ್ಪ (30) ಮೃತ ವ್ಯಕ್ತಿ. ಗುರುನಾಥ ಅವರು ಶುಕ್ರವಾರ ಮಧ್ಯಾಹ್ನ ಚಿಕಿತ್ಸೆಗಾಗಿ ತುರ್ವಿಹಾಳದ ಕ್ಲಿನಿಕ್ ಒಂದಕ್ಕೆ ತೆರಳಿದ್ದರು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಸುಮಾರು ಎರಡು ಗಂಟೆಗಳ ನಂತರ ಗುರುನಾಥ ಏಕಾಏಕಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿ ಮೃತರ ಕುಟುಂಬಸ್ಥರು ಹಾಗೂ ಸಂಬಂಧಿಕರು ಕ್ಲಿನಿಕ್‌ನಲ್ಲೇ ಮೃತದೇಹವಿಟ್ಟು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತುರ್ವಿಹಾಳ ಪೊಲೀಸರು ಪರಿಶೀಲನೆ ನಡೆಸಿದರು.
ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ :
ತುರ್ವಿಹಾಳ ಪಟ್ಟಣದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಕಲಿ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಅಮಾಯಕ ರೋಗಿಗಳ ಜೀವಕ್ಕೆ ಅಪಾಯ ಎದುರಾಗುತ್ತಿದೆ. ಪಟ್ಟಣದಲ್ಲಿ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಇದ್ದರೂ ಅಗತ್ಯ ಸಂದರ್ಭದಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ಆರೋಪಗಳೂ ಕೇಳಿಬಂದಿವೆ.
ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ, ಅರ್ಹತೆ ಇಲ್ಲದೆ ವೈದ್ಯಕೀಯ ಸೇವೆ ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.






