ರಾಜ್ಯ ಸರಕಾರವು ರೈತರಿಗೆ ಸ್ಪಂದಿಸಿದೆ : ಸಚಿವ ಶರಣಪ್ರಕಾಶ್ ಪಾಟೀಲ್

ರಾಯಚೂರು : ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಈಗಾಗಲೇ 26 ಕೋಟಿ ರೂ. ಲಭ್ಯವಿದ್ದು, ಪರಿಹಾರ ಕಾರ್ಯಕ್ಕೆ ಯಾವುದೇ ಹಣಕಾಸಿನ ಕೊರತೆಯಿಲ್ಲ. ನಮ್ಮ ಸರ್ಕಾರವು ರೈತರಿಗೆ ಸಂಪೂರ್ಣವಾಗಿ ಸ್ಪಂದಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಅ.3ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು, ಮುಂಗಾರು ಹಂಗಾಮಿನಲ್ಲಿ ಸಂಭವಿಸಿದ ಜೀವಹಾನಿ ಪ್ರಕರಣಗಳಲ್ಲಿ 7 ಕುಟುಂಬಗಳಿಗೆ ತಲಾ 5 ಲಕ್ಷ ರೂ. ನಂತೆ ಒಟ್ಟು 35 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ 11 ಸಣ್ಣ ಹಾಗೂ 4 ದೊಡ್ಡ ಜಾನುವಾರು ಜೀವಹಾನಿ ಪ್ರಕರಣಗಳಿಗೆ ಸಹ ಪರಿಹಾರ ಒದಗಿಸಲಾಗಿದೆ ಎಂದು ಹೇಳಿದರು.
ಜೀವಹಾನಿ ಮತ್ತು ಮನೆ ಹಾನಿ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಭರವಸೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಬಸನಗೌಡ ದದ್ದಲ್, ಆರ್.ಬಸವನಗೌಡ ತುರವಿಹಾಳ, ಹಂಪಯ್ಯ ನಾಯಕ, ಡಾ. ಎಸ್. ಶಿವರಾಜ ಪಾಟೀಲ, ಕರೆಮ್ಮ ಜಿ. ನಾಯಕ, ವಿಧಾನ ಪರಿಷತ್ ಸದಸ್ಯ ಎ. ವಸಂತಕುಮಾರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.





