ರಾಯಚೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ರಾಯಚೂರು : ಪ್ರವಾಸೋದ್ಯಮವು ದೇಶದ ವೈವಿಧ್ಯಮಯ ಸಂಸ್ಕೃತಿಯನ್ನು ಪರಿಚಯಿಸುವುದರ ಜೊತೆಗೆ ಆರ್ಥಿಕತೆಯನ್ನು ಬಲಪಡಿಸುವ ಪ್ರಮುಖ ಕ್ಷೇತ್ರವಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ನಝೀರ್ ಅಹ್ಮದ್ ಕನವಳ್ಳಿ ಹೇಳಿದರು.
ನಗರದ ಹಮದರ್ದ್ ಪ್ರೌಢಶಾಲಾ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ ಹಾಗೂ ಪುರಾತತ್ವ–ಪರಂಪರೆ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ 2025 ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಪ್ರವಾಸಿ ತಾಣಗಳನ್ನು ಗುರುತಿಸುವುದಷ್ಟೇ ಅಲ್ಲ, ಅವುಗಳನ್ನು ಆಕರ್ಷಕವಾಗಿ ಅಭಿವೃದ್ಧಿಪಡಿಸುವುದು ಹಾಗೂ ಮೂಲಸೌಲಭ್ಯ ಒದಗಿಸುವುದು ಇಲಾಖೆಯ ಆದ್ಯ ಕರ್ತವ್ಯ. ಜಿಲ್ಲೆಯಲ್ಲಿ ಅನೇಕ ಐತಿಹಾಸಿಕ ಸ್ಥಳಗಳಿದ್ದು, ಅವುಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ ಎಂದು ಹೇಳಿದರು.
ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಉಪನ್ಯಾಸಕ ಚೆನ್ನಾರೆಡ್ಡಿ ಮಾತನಾಡಿ, ಜಿಲ್ಲೆಯ ಪ್ರವಾಸಿ ತಾಣಗಳು ಇತಿಹಾಸದ ಅರಿವು ಮೂಡಿಸುವುದರ ಜೊತೆಗೆ ಸ್ಥಳೀಯರಿಗೆ ಆರ್ಥಿಕ ಲಾಭ ತರಬಲ್ಲವು. ಪ್ರವಾಸೋದ್ಯಮ ದಿನಾಚರಣೆ ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು ಎಂದು ಹೇಳಿದರು.
ಜಿಲ್ಲೆಯ ಐತಿಹಾಸಿಕ ಪರಂಪರೆಯನ್ನು ಉಲ್ಲೇಖಿಸಿ, ಅವರು ಮಸ್ಕಿ, ಗಬ್ಬೂರು, ಮುದಗಲ್, ಕವಿತಾಳ, ಕೋಟೆಕಲ್ ಮುಂತಾದ ತಾಣಗಳ ಪುರಾತನ ದೇವಾಲಯಗಳು, ಶಿಲಾಶಾಸನಗಳು ಮತ್ತು ರೇಖಾಚಿತ್ರಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ. ಸುಗುಣಾ, ಪುರಾತತ್ವ ಸಂಗ್ರಹಾಲಯದ ಕ್ಯೂರೇಟರ್ ಶಿವಪ್ರಕಾಶ, ಹಮದರ್ದ್ ಕಾಲೇಜಿನ ಪ್ರಾಂಶುಪಾಲ ಕಾಶಪ್ಪ, ಚಿತ್ರಕಲಾ ಶಿಕ್ಷಕ ಚಂದ್ರಶೇಖರ ಸೇರಿದಂತೆ ಹಲವರು ಭಾಗವಹಿಸಿದ್ದರು. ಡಾ. ದಂಡಪ್ಪ ಬಿರಾದಾರ ನಿರೂಪಿಸಿದರು.







