Shivamogga | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಮೂವರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ

ಸಾಂದರ್ಭಿಕ ಚಿತ್ರ | PC : Image by magnific
ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ಮೂವರು ಅಪರಾಧಿಗಳಿಗೆ ತಲಾ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ರೂ,3.29 ಲಕ್ಷ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
28 ವರ್ಷದ ಯುವಕನೊಬ್ಬ 17 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಮನೆಯಿಂದ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕೃತ್ಯಕ್ಕೆ 33 ವರ್ಷದ ವ್ಯಕ್ತಿಯೊಬ್ಬ ಕಾರು ಒದಗಿಸಿದ್ದ. 28 ವರ್ಷದ ಮತ್ತೊಬ್ಬ ವ್ಯಕ್ತಿ ಉಳಿಯಲು ಜಾಗ ನೆರವು ನೀಡಿದ್ದ. ಅಲ್ಲಿ ಯುವಕನು ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂಧ ಮೂವರ ವಿರುದ್ಧ ಶಿಕಾರಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಶಿಕಾರಿಪುರ ಟೌನ್ ಇನ್ಸ್ಪೆಕ್ಟರ್ ರುದ್ರೇಶ್ ಕೆ.ಪಿ. ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಬಿ. ಪಾಟೀಲ್ ಅವರು ಮೂವರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಅಲ್ಲದೆ, ದಂಡದ ಮೊತ್ತದಿಂದ ರೂ.3 ಲಕ್ಷ ಹಾಗೂ ಸರ್ಕಾರದ ವತಿಯಿಂದ ರೂ.4 ಲಕ್ಷ ಸೇರಿ ಒಟ್ಟು ರೂ.7 ಲಕ್ಷ ಪರಿಹಾರವನ್ನು ಸಂತ್ರಸ್ತ ಬಾಲಕಿಗೆ ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು






