ಸಿಎಂ ಡಿಕೆಶಿ ಭೇಟಿ ಬೆನ್ನಲ್ಲೇ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಲಹೆ ಮೇರೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದರಿಂದ ಹಿಂದೆ ಸರಿದಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.
ಸಚಿವ ಸ್ಥಾನ ತಪ್ಪಿರುವ ಹಿನ್ನೆಲೆಯಲ್ಲಿ ಸೋಮವಾರ ಅವರು ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರು. ಮಂಗಳವಾರ ಮುಖ್ಯಮಂತ್ರಿಗಳ ಭೇಟಿ ನಂತರ ರಾಜೀನಾಮೆ ನೀಡುವ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾಗಿ ತಿಳಿಸಿದ್ದಾರೆ.
ಸಚಿವ ಸ್ಥಾನ ಸಿಗದೆ ಇರುವುದು ನನಗೆ ತುಂಬಾ ಬೇಸರವಾಗಿತ್ತು. ಕಾರ್ಯಕರ್ತರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬಂದು ಕಣ್ಣೀರು ಹಾಕುತ್ತಾ ವಾಪಾಸ್ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ಕೊಡುವ ನಿರ್ಧಾರಕ್ಕೆ ಬಂದಿದ್ದೆ. ರಾತ್ರಿ ಮುಖ್ಯಮಂತ್ರಿಗಳು ಫೋನ್ ಮೂಲಕ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ, ತಾಳ್ಮೆ ಇರಲಿ ಎಂದು ಹೇಳಿದ್ದಲ್ಲದೇ, ಬೆಳಿಗ್ಗೆ ತಮ್ಮ ಮನೆಗೆ ಕರೆಸಿಕೊಂಡು ಕೆಲವು ಸಲಹೆಗಳನ್ನು ನೀಡಿದ್ದಾರೆ. ಪಕ್ಷ ಎಂದು ಬಂದಾಗ ಕೆಲವೊಮ್ಮೆ ಎಲ್ಲವನ್ನೂ ಸಹಿಸಿಕೊಂಡು ಹೋಗಬೇಕಾಗುತ್ತದೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ಪಕ್ಷಕ್ಕೆ ನಿಷ್ಟನಾಗಿ ಕೆಲಸ ಮಾಡಿದ್ದೇನೆ. ಮುಂದೆ ಅವಕಾಶ ಮಾಡಿಕೊಡುತ್ತೇನೆ ಎಂದು ಹೇಳಿದ್ದರು. ಹಿಂದುಳಿದ ವರ್ಗದಿಂದ ಬಂದ ನನಗೆ ದೊಡ್ಡವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಮುಂದೆ ಬರುವ ಚುನಾವಣೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಮುಖ್ಯಮಂತ್ರಿಗಳ ಕೈಬಲಪಡಿಸಲು ನಾನು ರಾಜೀನಾಮೆ ಕೊಡುವುದರಿಂದ ಹಿಂದೆ ಸರಿಯುತ್ತಿದ್ದೇನೆ. ನಮ್ಮ ಕ್ಷೇತ್ರದ ಕಾರ್ಯಕರ್ತರು ರಾಜೀನಾಮೆ ಕೊಡದೆ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದರು.




