ಮಲೆನಾಡಿನಲ್ಲಿ ಮಂಗನ ಕಾಯಿಲೆ ಆತಂಕ; ತೀರ್ಥಹಳ್ಳಿಯ ಕೆಎಫ್‌ಡಿ ಶಂಕಿತ ವ್ಯಕ್ತಿ ಮೃತ್ಯು

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ (ಕೆಎಫ್‌ಡಿ – ಕ್ಯಾಸನೂರು ಫಾರೆಸ್ಟ್ ಡಿಸೀಸ್) ಭೀತಿ ಆರಂಭವಾಗಿದೆ. ತಾಲೂಕಿನ ಕಟ್ಟೆಹಕ್ಕು ಸಮೀಪದ ಸಸಿ ತೋಟದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಾವು ಕೆಎಫ್‌ಡಿ ಸೋಂಕಿನಿಂದ ಸಂಭವಿಸಿರುವ ವರ್ಷದ ಮೊದಲ ಪ್ರಕರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಘಟನೆಯ ವಿವರ:
ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಟ್ಟೆಹಕ್ಕು ಸಮೀಪದ ಸಸಿ ತೋಟದ ನಿವಾಸಿಯೊಬ್ಬರನ್ನು ಮೊದಲಿಗೆ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ನಿನ್ನೆ ತಡರಾತ್ರಿ ಸುಮಾರು 2.30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ.
ಮೃತರಿಗೆ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಇದು ಈ ವರ್ಷದ ಮೊದಲ ಶಂಕಿತ ಸಾವಿನ ಪ್ರಕರಣವಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಪ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಪಷ್ಟ ಕ್ರಮಗಳನ್ನು ಕೈಗೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.





