ಶಿವಮೊಗ್ಗ | ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಶಿವಮೊಗ್ಗ: ರಾಜ್ಯ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ನಗರದ ಗೋಪಿವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಜಿಲ್ಲಾಧಿಕಾರಿ ಕಛೇರಿ ಎದುರು ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನುದೆಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷರು, ಶಾಸಕ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಮಳೆಗಾಲ ಚೆನ್ನಾಗಿ ಆಗಿದೆ. ಆದರೆ ರೈತರು ರಸಗೊಬ್ಬರಕ್ಕಾಗಿ ಪರದಾಡುತ್ತಿದ್ದಾರೆ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರೇ ರೈತರ ಬಗ್ಗೆ ತಾತ್ಸಾರ ಯಾಕೆ ಎಂದು ಪ್ರಶ್ನಿಸಿದರು.
ಅಧಿಕಾರಿಗಳ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ರಸಗೊಬ್ಬರ ಎಲ್ಲಿದೆ ಎಂದು ಪ್ರಶ್ನಿಸಿದ ಅವರು, ಎಲ್ಲವನ್ನೂ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸರಕಾರ 8.73 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಗೊಬ್ಬರನ್ನು ರಾಜ್ಯಕ್ಕೆ ಕಳುಹಿಸಿದೆ ಎಂದು ಕೃಷಿ ಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ದುರ್ದೈವ ಅಂದರೆ ರಾಜ್ಯದ ಕೃಷಿ ಸಚಿವರು ಯಾರು ಎಂಬುದು ರಾಜ್ಯದ ಜನತೆಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ 4283 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಸರಕಾರದಲ್ಲಿ 900ಕ್ಕೂ ಹೆಚ್ಚು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ಯಾಕೆ ತಾತ್ಸಾರ ಎಂದು ಪ್ರಶ್ನಿಸಿದರು.
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಾಗಿದ್ದಾಗ ಸೊರಬದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ಮಾಡಿದ್ದರು. ಅಧಿಕಾರಕ್ಕೆ ಬಂದ ಮೇಲೆ ರೈತರನ್ನು ಮರೆತಿದ್ದಾರೆ. ಬಗರ್ ಹುಕುಂ ರೈತರ ಬಗ್ಗೆ ಕಾಳಜಿ ಇಲ್ಲ. ಹೋರಾಟ ಮರೆತು ಹೋಗಿದೆ. ಹಾರಾಟ ಮಾಡುತ್ತಿದ್ದಾರೆ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ಅಧಿಕಾರಕ್ಕೆ ಬಂದ ಮೇಲೆ ಶಿಷ್ಟಾಚಾರದ ಬಗ್ಗೆ ಮಾತನಾಡುವ ಸಚಿವರು ರೈತರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಸಂಸದ ಬಿ.ವೈ ರಾಘವೇಂದ್ರ ಮಾತನಾಡಿ, ಕಾಂಗ್ರೆಸ್ ಸರಕಾರ ಭ್ರಷ್ಟ, ರೈತ ವಿರೋಧಿಯಾಗಿದೆ. ಅರಣ್ಯ ಕಾಯ್ದೆ-1980 ಜಾರಿಗೂ ಬರುವ ಮೊದಲು ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೂ ನೋಟೀಸ್ ನೀಡುತ್ತಿದ್ದಾರೆ. ಅರಣ್ಯ ಕಾನೂನು ಬಳಸಿಕೊಂಡು ರೈತರಿಗೆ ನೋಟೀಸ್ ನೀಡಿ ನ್ಯಾಯಾಲಯದ ಕಟೆಕಟೆಗೆ ಹತ್ತಿಸುವ ಕೆಲಸವನ್ನು ರಾಜ್ಯ ಸರಕಾರದಿಂದ ನಡೆಯುತ್ತಿದೆ. 1 ಲಕ್ಷಕ್ಕೂ ಹೆಚ್ಚು ರೈತರಿಗೆ ನೋಟೀಸ್ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ 3 ಎಕರೆಗಿಂತ ಕಡಿಮೆ ಸಾಗುವಳಿ ಭೂಮಿ ಹೊಂದಿರುವ ರೈತರನ್ನು ತೆರವು ಮಾಡಬಾರದು. ರೈತರ ಭೂಮಿ ತೆರವಿಗೆ ಮುಂದಾದರೆ ಬಿಜೆಪಿ ವತಿಯಿಂದ ಹೋರಾಟ ನಡೆಸಲಾಗುವುದು ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅರಣ್ಯ ಕಾನೂನಿನ ನೆಪದಲ್ಲಿ ಅರಣ್ಯ ಇಲಾಖೆಯವರು ರೈತರ ಸಾಗುವಳಿ ಭೂಮಿ ತೆರವಿಗೆ ನೋಟೀಸ್ ನೀಡುತ್ತಿದ್ದಾರೆ. ನಿರಂತರವಾಗಿ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ , ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಮಾಜಿ ಶಾಸಕ ಕೆ.ಬಿ.ಆಶೋಕ್ ನಾಯ್ಕ್, ಮಾಜಿ ಶಾಸಕ ಬಿ.ಸ್ವಾಮಿರಾವ್, ಕೆ.ಬಿ ಕುಮಾರಸ್ವಾಮಿ, ಮುಖಂಡರಾದ ಎಸ್.ದತ್ತಾತ್ರಿ, ಸಿದ್ದಲಿಂಗಪ್ಪ, ಮಲ್ಲಿಕಾರ್ಜುನ ಹಕ್ರೆ, ಹುನಗೋಡು ರತ್ನಾಕರ್ ಸೇರಿದಂತೆ ಹಲವರಿದ್ದರು.







