ಪರಿಶಿಷ್ಟ ಪಂಗಡಗಳ ಹಿತಾಸಕ್ತಿ ಕಾಪಾಡುವುದು ಸರಕಾರದ ಕರ್ತವ್ಯ : ಸಚಿವ ಟಿ.ರಘುಮೂರ್ತಿ

ಟಿ.ರಘುಮೂರ್ತಿ
ಶಿವಮೊಗ್ಗ : ಪರಿಶಿಷ್ಟ ಪಂಗಡಗಳ ಜನರನ್ನು ಸಾಮಾಜಿಕ ಅನ್ಯಾಯ ಮತ್ತು ಎಲ್ಲಾ ರೀತಿಯ ಶೋಷಣೆಯಿಂದ ರಕ್ಷಿಸುವುದು ಮತ್ತು ಅವರ ಶೈಕ್ಷಣಿಕ, ಆರ್ಥಿಕ ಹಿತಾಸಕ್ತಿಗಳನ್ನು ವಿಶೇಷ ಕಾಳಜಿಯಿಂದ ಉತ್ತೇಜಿಸುವುದು ಸರಕಾರದ ಹಾಗೂ ಸಂಬಂಧಿತ ಇಲಾಖಾ ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ.ರಘುಮೂರ್ತಿ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ನ ಅಬ್ದುಲ್ ನಝೀರ್ ಸಾಬ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಯೋಜನೆಗಳ ಅನುಷ್ಠಾನದ ಕುರಿತು ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶತಮಾನಗಳಿಂದ ಅರಣ್ಯ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಉಳಿದಿರುವ ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರುವುದು, ಸಾಕ್ಷರತೆ ಪ್ರಮಾಣ ತುಂಬಾ ಕಡಿಮೆ ಇರುವ ಪ್ರದೇಶಗಳಲ್ಲಿ ವಿಶೇಷ ಶಾಲೆ, ಹಾಸ್ಟೆಲ್ ಸೌಲಭ್ಯ ಒದಗಿಸಿ, ಅವರನ್ನು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವುದು, ಭೂಮಿ ಇಲ್ಲದ, ಕೃಷಿಯನ್ನೇ ನಂಬಿರುವ ಜನರಿಗೆ ಉದ್ಯೋಗ, ಸ್ವಯಂ ಉದ್ಯೋಗಕ್ಕೆ ನೆರವು ನೀಡಿ, ಅವರ ಬಡತನ ನಿವಾರಿಸಲು ಸರಕಾರವು ಈಗಾಗಲೇ ರೂಪಿಸಲಾದ ಕಾರ್ಯಕ್ರಮಗಳನ್ನು ಕ್ರಮಬದ್ಧವಾಗಿ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವುದು ಇಂದಿನ ತುರ್ತು ಅಗತ್ಯಗಳಲ್ಲೊಂದಾಗಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗಾಗಿಯೇ ಸರಕಾರದಿಂದ ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಅರ್ಹರಿಗೆ ತಲುಪಿಸುವಲ್ಲಿ ಶ್ರಮಿಸುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ರೇಷ್ಮೆ ಬೆಳೆಯಲು ಬಹುಸಂಖ್ಯಾತ ರೈತರು ಆಸಕ್ತಿ ಹೊಂದಿದ್ದು, ರೇಷ್ಮೆ ಬೆಳೆ ಬೆಳೆಯಲು ಅಗತ್ಯ ಸಹಕಾರ ಮತ್ತು ಇಲಾಖೆಯಿಂದ ನೆರವನ್ನು ನೀಡುವಂತೆ ಸೂಚಿಸಿದರು.
ಶಾಸಕ ಚನ್ನಬಸಪ್ಪ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದು, ಪ್ರಸಕ್ತ ಮೃತರಾಗಿರುವ ಕುಟುಂಬಕ್ಕೆ ಇಲಾಖೆಯ ವತಿಯಿಂದ ವೇತನ, ಭತ್ಯೆಮತ್ತಿತರ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮನವಿ ಮಾಡಿದರು.
ಸಭೆಯಲ್ಲಿ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಡಾ.ಧನಂಜಯ ಸರ್ಜಿ, ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಅಶೋಕ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅಶ್ವಥ್ ಉಪಸ್ಥಿತರಿದ್ದರು.






