Shivamogga | ತೀರ್ಥಹಳ್ಳಿಯ ಶಾಸಗಿ ವಸತಿ ಶಾಲೆಯಲ್ಲಿ ಆಹಾರ ಸೇವಿಸಿದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

ಶಿವಮೊಗ್ಗ: ಕಳೆದ ರಾತ್ರಿ ಆಹಾರ ಸೇವಿಸಿದ ಬಳಿಕ ಸುಮಾರು 50ರಿಂದ 70 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಶನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ.
ವಸತಿ ಶಾಲೆಯಲ್ಲಿ ರಾತ್ರಿ ಅವಲಕ್ಕಿ ಹಾಗೂ ದಾಲ್ ಚಪಾತಿ ತಿಂದಿದ್ದ ವಿದ್ಯಾರ್ಥಿಗಳಲ್ಲಿ ದಿಢೀರ್ ವಾಂತಿ-ಭೇದಿ ಕಾಣಿಸಿಕೊಂಡು ಆರೋಗ್ಯ ಏರುಪೇರಾಗಿತ್ತು. ತಕ್ಷಣವೇ ಅಸ್ವಸ್ಥ ಮಕ್ಕಳನ್ನು ಕೋಣಂದೂರು ಸರಕಾರಿ ಆಸ್ಪತ್ರೆ ಹಾಗೂ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ತೀವ್ರ ಅಸ್ವಸ್ಥಗೊಂಡಿದ್ದ 11 ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಿಂದ ಪೋಷಕರು ತೀವ್ರ ಆತಂಕಗೊಂಡಿದ್ದು, ವಸತಿ ಶಾಲೆಯ ನೈರ್ಮಲ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಹಾರ ಪರೀಕ್ಷೆಯ ವರದಿ ಬಂದ ಬಳಿಕ ಅಸ್ವಸ್ಥತೆಗೆ ನಿಖರ ಕಾರಣ ಏನು ಎಂಬುದು ಸ್ಪಷ್ಟವಾಗಲಿದೆ. ಅಷ್ಟರವರೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






