ಶಿವಮೊಗ್ಗ | ಖಾಸಗಿ ಬಸ್-ಪೆಟ್ರೋಲ್ ಟ್ಯಾಂಕರ್ ನಡುವೆ ಢಿಕ್ಕಿ : ಓರ್ವ ಮಹಿಳೆ ಗಂಭೀರ

ಶಿವಮೊಗ್ಗ: ಗಜಾನನ ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಢಿಕ್ಕಿಯಾಗಿ, ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡ ಘಟನೆ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಕೋಡೂರು ಬಳಿ ಇಂದು ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಕೆಲ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಅನೇಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಗಾಯಾಳುಗಳನ್ನು ತಕ್ಷಣವೇ ಹೊಸನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Next Story





