ಬೆಂಗಳೂರು: ಆರೋಪಿಯಿಂದ ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್‍ಸ್ಟೇಬಲ್ ಬಂಧನ

ಬೆಂಗಳೂರು, ಜು.17: ಪ್ರಕರಣವೊಂದರಲ್ಲಿ ಆರೋಪಿಗೆ ಸಹಾಯ ಮಾಡುವುದಾಗಿ 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್‍ಸ್ಟೇಬಲ್ ಒಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ರಾಮನಗರದ ಸೈಬರ್ ಕ್ರೈಂ, ಆರ್ಥಿಕ ಅಪರಾಧ ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯ ಮಹೇಶ್ (43) ಬಂಧಿತನನಾಗಿದ್ದು, ಮಹೇಶ್ ಪರವಾಗಿ ಲಂಚ ಪಡೆಯುತ್ತಿದ್ದ ಆತನ ಸ್ನೇಹಿತನನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2020ರಲ್ಲಿ ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರಿನ ಮಂಜೇಗೌಡ ಎಂಬುವರಿಂದ ಮಹೇಶ್ 2.5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈಗಾಗಲೇ 75 ಸಾವಿರ ರೂ. ಲಂಚ ಪಡೆದಿದ್ದ. ಹೆಚ್ಚಿನ ಹಣ ನೀಡಲು ಸಾಧ್ಯವಾಗದಿದ್ದಾಗ ಮಂಜೇಗೌಡ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ಈ ದೂರಿನ ಆಧಾರದ ಮೇಲೆ ರವಿವಾರ(ಜು.16) ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡು ಉತ್ತರಹಳ್ಳಿ ಬಳಿ ದೂರುದಾರನಿಂದ 50 ಸಾವಿರ ರೂ.ಗಳನ್ನು ಪಡೆಯುತ್ತಿದ್ದಾಗ ಮಹೇಶ್ ಹಾಗೂ ಆತನ ಪರವಾಗಿ ಹಣ ಸ್ವೀಕರಿಸುತ್ತಿದ್ದ ರಮೇಶ್ ಎಂಬಾತನನ್ನು ಹಣದ ಸಮೇತ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.





