ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಿ ಆದೇಶ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು, ಆ.26: ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂಬ ವಿರೋಧದ ನಡುವೆಯೂ ಪರಿಶಿಷ್ಟ ಜಾತಿಯಲ್ಲಿ ಬರುವ 101 ಜಾತಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ, ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಿ ಸೋಮವಾರ ತಡರಾತ್ರಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಪರಿಶಿಷ್ಟ ಜಾತಿಯಲ್ಲಿ ಬರುವ ಬಲಗೈ ಸಮುದಾಯಗಳಿಗೆ ‘ಪ್ರವರ್ಗ ಎ’ನಲ್ಲಿ ಶೇ.6, ಎಡಗೈ ಸಮುದಾಯಗಳಿಗೆ ‘ಪ್ರವರ್ಗ ಬಿ’ನಲ್ಲಿ ಶೇ.6 ಮತ್ತು ಭೋವಿ, ಲಮಾಣಿ, ಕೊರಮ, ಕೊರಚ ಸೇರಿದಂತೆ ಇತರ ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ‘ಪ್ರವರ್ಗ ಸಿ’ನಲ್ಲಿ ಶೇ.5ರಷ್ಟು ಮೀಸಲಾತಿಯನ್ನು ನೀಡಿ ತಕ್ಷಣದಿಂದ ಜಾರಿ ಬರುವಂತೆ ಆದೇಶಿಸಿದೆ.
ಸರಕಾರವು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ(ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗವನ್ನು ರಚಿಸಿ ಆದೇಶಿಸಲಾಗಿತ್ತು. ಅದರಂತೆ, ಆಯೋಗವು ಆ.4ರಂದು ಸರಕಾರಕ್ಕೆ ವರದಿ ಸಲ್ಲಿಸಿದೆ.
ಆಯೋಗವು ಪರಿಶಿಷ್ಟ ಜಾತಿಗಳನ್ನು ಪ್ರವರ್ಗ ಎ, ಬಿ, ಸಿ, ಡಿ ಮತ್ತು ಇ ಎಂದು 5 ಗುಂಪುಗಳಾಗಿ ವರ್ಗೀಕರಿಸಿತ್ತು. ಆದರೆ ಸಚಿವ ಸಂಪುಟದಲ್ಲಿ ವರದಿಯನ್ನು ಕೂಲಂಕುಷವಾಗಿ ಚರ್ಚಿಸಿ, 5 ವರ್ಗಗಳ ಬದಲಾಗಿ ಪ್ರವರ್ಗ- ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಲಾಯಿತು. ಪರಿಶಿಷ್ಟ ಜಾತಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇ.17 ಮೀಸಲಾತಿಯನ್ನು 6:6:5ರ ಅನುಪಾತದಲ್ಲಿ ಈ ಮೂರು ವರ್ಗಗಳಿಗೆ ವಿಂಗಡಿಸಲಾಗಿದೆ.
ಆಯೋಗದ ವರದಿಯಲ್ಲಿನ ಪ್ರವರ್ಗ- ಇ ರಲ್ಲಿನ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಸಮುದಾಯಗಳು ತಮ್ಮ ಮೂಲ ಜಾತಿಯನ್ನು ತಿಳಿಸದೇ ಇರುವುದರಿಂದ, ಈ ಜಾತಿಗಳು ಪ್ರವರ್ಗ-ಎ ಅಥವಾ ಪ್ರವರ್ಗ-ಬಿಗಳಲ್ಲಿ ಮೀಸಲಾತಿ ಸೌಲಭ್ಯವನ್ನು ಪಡೆಯಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಒಳಮೀಸಲಾತಿ ಹಿನ್ನೆಲೆಯಲ್ಲಿ ತಡೆಹಿಡಿಯಲಾದ ನೇರ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಕ್ರಮವಹಿಸುವುದು. ಎಲ್ಲ ಇಲಾಖೆಗಳು ಮತ್ತು ಅವುಗಳ ಅಧೀನದ ನಿಗಮ/ಮಂಡಳಿ/ಸಂಸ್ಥೆಗಳಲ್ಲಿ ಮುಂಬಡ್ತಿ ಪ್ರಕ್ರಿಯೆಯನ್ನೂ ಮುಂದುವರೆಸಬಹುದು ಎಂದು ಸರಕಾರ ಹೇಳಿದೆ.
ಉದ್ಯೋಗಗಳ ನೇಮಕಾತಿಯಲ್ಲಿ ಹಾಜರಾಗುವ ಎಲ್ಲ ಅಭ್ಯರ್ಥಿಗಳಿಗೆ ಆಯಾ ನೇಮಕಾತಿಗಳಿಗೆ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲು ತೀರ್ಮಾನಿಸಲಾಗಿದ್ದು, ಈ ಬಗ್ಗೆ ಪ್ರತ್ಯೇಕವಾಗಿ ಆದೇಶ ಹೊರಡಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಗತ್ಯ ಕ್ರಮವಹಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಹೊಸ ದತ್ತಾಂಶ ಅಥವಾ ಮಾಹಿತಿ ಬಂದಾಗ ಅಗತ್ಯ ಮಾರ್ಪಾಡುಗಳನ್ನು ಮಾಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ಅಧಿಕಾರ ನೀಡುವ ಬಗ್ಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧಿನಿಯಮ-2002ಕ್ಕೆ ಸೂಕ್ತ ತಿದ್ದುಪಡಿ ಮಾಡಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ, ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲಾಗುವುದು ಎಂದು ತಿಳಿಸಿದೆ.
ಹೋರಾಟಗಾರರ ಮೇಲಿನ ಮೊಕದ್ದಮೆ ವಾಪಸ್
ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದ್ದು, ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳ ಕುರಿತು ಪರಿಶೀಲಿಸಿ ತುರ್ತಾಗಿ ಸರಕಾರಕ್ಕೆ ಶಿಫಾರಸು ಮಾಡುವ ಬಗ್ಗೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿಯು ಕ್ರಮವಹಿಸಬೇಕು. ಗೃಹ ಇಲಾಖೆ ಈ ಬಗ್ಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ.
ರಾಜ್ಯ ಸರಕಾರವು ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗದ ವರದಿಯನ್ನು ಯಾಥವತ್ತಾಗಿ ಜಾರಿ ಮಾಡಿಲ್ಲ. ಬದಲಾಗಿ ಪರಿಶಿಷ್ಟಿ ಜಾತಿಯಲ್ಲಿನ ಪ್ರಬಲ ಜಾತಿಗಳನ್ನು ಸೂಕ್ಷ್ಮ ಅಲೆಮಾರಿ ಸಮುದಾಯಗಳೊಂದಿಗೆ ಸೇರಿ ಒಳ ಮೀಸಲಾತಿಯನ್ನು ನೀಡಿದೆ. ಇದರಿಂದ ಅಲೆಮಾರಿ ಸಮುದಾಯ ಅನ್ಯಾಯವಾಗಿದ್ದು, ಈ ಸಮುದಾಯಗಳಿಗೆ ಕನಿಷ್ಟ ಶೇ.1ರಷ್ಟು ಪ್ರತ್ಯೇಕ ಮೀಸಲಾತಿಯನ್ನು ಸರಕಾರವು ಕಲ್ಪಿಸಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ ರಾಜ್ಯ ಸರಕಾರವು ಇದನ್ನು ಕಡೆಗಣಿಸಿ ಆದೇಶ ಹೊರಡಿಸಿದೆ ಎಂದು ಅಲೆಮಾರಿ ಸಮುದಾಯಗಳು ವಿರೋಧ ವ್ಯಕ್ತಪಡಿಸಿವೆ.







