ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರಿಗೆ ಮೋಸ : ಕಾಂಗ್ರೆಸ್ ವಿರುದ್ಧ ಗೋವಿಂದ ಕಾರಜೋಳ ವಾಗ್ದಾಳಿ

ಗೋವಿಂದ ಕಾರಜೋಳ
ಶಿವಮೊಗ್ಗ: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರಿಗೆ ಮೋಸ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಹಿಂದೆ ಸಿದ್ದರಾಮಯ್ಯ, ಈಗ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು.
ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಆರ್ಥಿಕವಾಗಿ ದಿವಾಳಿಯಾಗಿದ್ದು, ಸಂಪನ್ಮೂಲ ಕ್ರೋಢೀಕರಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಮಾಸಿಕ 2 ಸಾವಿರ ರೂ., ಯುವಕರಿಗೆ ಯುವನಿಧಿ, ಉಚಿತ ವಿದ್ಯುತ್ ಹಾಗೂ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದ ಬಳಿಕ ಒಂದಲ್ಲ ಒಂದು ನೆಪ ಹೇಳಿ ಜನರಿಗೆ ಮೋಸ ಮಾಡುತ್ತಿದೆ ಎಂದು ದೂರಿದರು.
ದಲಿತರ ಅಭಿವೃದ್ಧಿಗಾಗಿ ಮೀಸಲಿರಬೇಕಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ. ಆ ಹಣವನ್ನು ಶಿಕ್ಷಣ, ಉದ್ಯೋಗ ಮತ್ತು ಸಾಮಾಜಿಕ ಅಭಿವೃದ್ಧಿಗೆ ಬಳಸಬೇಕಾಗಿತ್ತು. ಕಳೆದ ಮೂರು ವರ್ಷಗಳಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಎಸ್ಸಿ-ಎಸ್ಟಿ ಸಮುದಾಯದ ಮಹಿಳೆಯರ ಮೇಲಿನ ದೌರ್ಜನ್ಯ, ರೈತರ ಆತ್ಮಹತ್ಯೆಗಳಂತಹ ಗಂಭೀರ ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸಿಲ್ಲ ಎಂದು ಆರೋಪಿಸಿದರು.
ಗೃಹಲಕ್ಷ್ಮಿ ಯೋಜನೆಗೂ ಇದೀಗ ಸಂಕಷ್ಟ ಎದುರಾಗಿದ್ದು, ಇದರ ವಿರುದ್ಧ ರಾಜ್ಯದ ಜನತೆ ಎಚ್ಚೆತ್ತುಕೊಂಡು ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.
ರಾಜ್ಯ ಸರ್ಕಾರ ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಮುಂದಾಗಿರುವುದನ್ನು ವಿರೋಧಿಸಿದ ಕಾರಜೋಳ, ಟಾಟಾ ಪವರ್ ಸೇರಿದಂತೆ ಖಾಸಗಿ ಕಂಪನಿಗಳಿಗೆ ವಿದ್ಯುತ್ ವಿತರಣೆಯ ಜವಾಬ್ದಾರಿ ನೀಡಿದರೆ ಎಸ್ಸಿ-ಎಸ್ಟಿ ಸಮುದಾಯದ ಉದ್ಯೋಗ ಅವಕಾಶಗಳಿಗೆ ಧಕ್ಕೆಯಾಗಲಿದೆ. ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ವ್ಯವಸ್ಥೆ ಇಲ್ಲದ ಕಾರಣ ಸಾಮಾಜಿಕ ನ್ಯಾಯಕ್ಕೆ ಹಾನಿಯಾಗುತ್ತದೆ ಎಂದು ಹೇಳಿದರು.
ವಿದ್ಯುತ್ ಖಾಸಗೀಕರಣ ಯಾವುದೇ ಕಾರಣಕ್ಕೂ ಜಾರಿಯಾಗಬಾರದು. ಇದರಿಂದ ರೈತರಿಗೆ ದೊರೆಯುತ್ತಿರುವ ಉಚಿತ ವಿದ್ಯುತ್ ಯೋಜನೆಗಳಿಗೂ ಧಕ್ಕೆಯಾಗುವ ಸಾಧ್ಯತೆ ಇದೆ. ರೈತರು ಹಾಗೂ ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಬೇಕು ಎಂದು ಸಲಹೆ ನೀಡಿದರು.
ಬಿಡದಿ ಪ್ರದೇಶದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕುರಿತು ಮಾತನಾಡಿದ ಅವರು, ರೈತರ ಒಪ್ಪಿಗೆ ಇಲ್ಲದೆ ಭೂಮಿ ವಶಪಡಿಸಿಕೊಳ್ಳಬಾರದು. ರೈತರು ಹಲವು ಬೆಳೆಗಳನ್ನು ಬೆಳೆಯುತ್ತಿರುವ ಕೃಷಿ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.






