ಜೂ.18ಕ್ಕೆ ಮೇಲ್ಮನೆ, ರಾಜ್ಯಸಭಾ ಚುನಾವಣೆ: ಪವನ್ ಖೇರಾ, ಬಿ.ಕೆ.ಹರಿಪ್ರಸಾದ್, ಮನ್ಸೂರ್ ಅಲಿ ಖಾನ್ ಸಹಿತ ಹಲವರು ನಾಮಪತ್ರ ಸಲ್ಲಿಕೆ

ಬೆಂಗಳೂರು : ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿಗೆ ಜೂ.18ರಂದು ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಶನಿವಾರ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ರಾಜ್ಯಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳಾದ ಎಐಸಿಸಿ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್ ಅಲಿ ಖಾನ್ ಹಾಗೂ ಪಕ್ಷೇತರ ಅಭ್ಯರ್ಥಿ ಭೋಜಣ್ಣ ಸೋಮಯ್ಯ ನಾಮಪತ್ರ ಸಲ್ಲಿಸಿದರು.
ಇವರ ಜೊತೆಗೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ, ಪಿ.ವಿ.ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರು ನಾಮಪತ್ರ ಸಲ್ಲಿಕೆ ಮಾಡಿದರು.
ನಾಮಪತ್ರ ಸಲ್ಲಿಕೆಗೆ ಜೂನ್ 8 ಕೊನೆಯ ದಿನವಾಗಿದ್ದು, ಜೂ.18ರಂದು ರಾಜ್ಯಸಭೆಯ ನಾಲ್ಕು ಹಾಗೂ ವಿಧಾನ ಪರಿಷತ್‍ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಂದು ಸಂಜೆ ಮತಗಳ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.




