ಆಕ್ಷೇಪಾರ್ಹ ಹೇಳಿಕೆ, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ; ಯತ್ನಾಳ್ ವಿರುದ್ಧದ 4 ಪ್ರಕರಣ ರದ್ದು

ಬೆಂಗಳೂರು : 'ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ‘ ಎಂಬ ಆಕ್ಷೇಪಾರ್ಹ ಹೇಳಿಕೆಯೂ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪ್ರಚೋದನಾಕಾರಿ ಭಾಷಣದ ಮಾಡಿದ ಆರೋಪದಲ್ಲಿ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾಗಿದ್ದ 4 ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿದೆ.
ವಿಜಯಪುರದ ಗಾಂಧಿ ಚೌಕ್, ಬೆಂಗಳೂರಿನ ಸಂಜಯನಗರ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಹಾಗೂ ಬಾಗಲಕೋಟೆ ಜಿಲ್ಲೆ ಮುಧೋಳ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳು ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಸನಗೌಡ ಪಾಟೀಲ ಯತ್ನಾಳ್ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೆಲ ಕಾಲ ಅರ್ಜಿಗಳನ್ನು ಆಲಿಸಿದ ನ್ಯಾಯಪೀಠ, ಅರ್ಜಿಗಳನ್ನು ಪುರಸ್ಕರಿಸಿ, ಯತ್ನಾಳ್ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸಿ ಆದೇಶಿಸಿತು. ವಿಸ್ತೃತ ತೀರ್ಪು ಲಭ್ಯವಾಗಬೇಕಿದೆ.
ಪ್ರಕರಣವೇನು?
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಹೇಳಿಕೆ ಹೇಳಿದ್ದರು. ಈ ಸಂಬಂಧ ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ 2024ರ ಏಪ್ರಿಲ್‌ನಲ್ಲಿ ದೂರು ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ದಿನೇಶ್ ಗುಂಡೂರಾವ್ ಪತ್ನಿ ತಬು ಗುಂಡೂರಾವ್ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಿಸಿದ್ದರು.
ಇದಲ್ಲದೇ, ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣ ಹಾಗೂ ಬಾಗಕೋಟೆ ಜಿಲ್ಲೆಯ ಮುಧೋಳದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ 2024ರ ಸೆಪ್ಟೆಂಬರ್ ತಿಂಗಳಲ್ಲಿ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿತ್ತು. ಈ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.






