ಕರ್ನಾಟಕದಲ್ಲಿ ಎಐ ವಿಶ್ವವಿದ್ಯಾಲಯ ಸ್ಥಾಪನೆಗೆ ಮಹತ್ವದ ಮೊದಲ ಹೆಜ್ಜೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕರ್ನಾಟಕದಲ್ಲಿ ಸ್ವಂತ ಕೃತಕ ಬುದ್ಧಿಮತ್ತೆ (ಎಐ) ವಿಶ್ವವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಮೊದಲ ಹೆಜ್ಜೆಯನ್ನಿಟ್ಟಿದ್ದು, ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸಹಯೋಗದಲ್ಲಿ ಕರ್ನಾಟಕ ಎಐ ವಿಶ್ವವಿದ್ಯಾಲಯ ಸ್ಥಾಪನೆಯ ಉಪಕ್ರಮವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಐಟಿ-ಬಿಟಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಹಾಗೂ ಎಸ್‍ಟಿಪಿಐ ವತಿಯಿಂದ ಮಂಗಳವಾರ ಇಲ್ಲಿನ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮೂರು ದಿನಗಳ ಕಾಲ ಆಯೋಜಿಸಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ (ಟೆಕ್ ಸಮಿಟ್-ಬಿಟಿಎಸ್) 29ನೆ ಆವೃತ್ತಿಗೆ ಚಾಲನೆ ನೀಡಿ ಮಾತನಾಡಿದ ಅವರು,ಎಐ ಸಂಶೋಧನೆ, ಕೌಶಲಾಭಿವೃದ್ಧಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವುದು ಈ ಉಪಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.
ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಸ್ಪರ್ಧಿಸಬಲ್ಲ ಎಐ ಪರಿಣತ ಮಾನವ ಸಂಪನ್ಮೂಲವನ್ನು ರೂಪಿಸುವುದು, ಸಂಶೋಧನಾ ಸಾಮಥ್ರ್ಯವನ್ನು ಹೆಚ್ಚಿಸುವುದು ಹಾಗೂ ನವೋದ್ಯಮಗಳು ತಮ್ಮ ನೂತನ ಆಲೋಚನೆಗಳನ್ನು ನೈಜ ಜಗತ್ತಿನ ಬಳಕೆಗೆ ಪೂರಕವಾದ ತಂತ್ರಜ್ಞಾನ ಪರಿಹಾರಗಳಾಗಿ ಪರಿವರ್ತಿಸಲು ನೆರವಾಗುವುದು ಇದರ ಆದ್ಯತೆಯಾಗಿರಲಿದೆ. ಎಐ ತಂತ್ರಜ್ಞಾನವು ಕೈಗಾರಿಕೆ, ಉದ್ಯಮ, ಶಿಕ್ಷಣ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರುತ್ತಿದೆ. ಈ ಪರಿವರ್ತನೆಯ ಸಂದರ್ಭದಲ್ಲಿ ಕರ್ನಾಟಕದ ಯುವ ಪ್ರತಿಭೆಗಳಿಗೆ ಅಗತ್ಯವಾದ ತಾಂತ್ರಿಕ ಕೌಶಲ, ಸಂಶೋಧನಾ ಅವಕಾಶಗಳು ಮತ್ತು ಸೂಕ್ತ ಪರಿಸರ ವ್ಯವಸ್ಥೆಯ ಬೆಂಬಲ ಒದಗಿಸುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಎಐ ವಿಶ್ವವಿದ್ಯಾಲಯ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ತಿಳಿಸಿದರು.
ಕರ್ನಾಟಕ ಎಐ ವಿಶ್ವವಿದ್ಯಾಲಯವು ರಾಜ್ಯದಲ್ಲಿ ಎಐ ಸಂಶೋಧನೆ ಮತ್ತು ನಾವೀನ್ಯತೆಯ ಸಾಮಥ್ರ್ಯವನ್ನು ವಿಸ್ತರಿಸುವುದರ ಜೊತೆಗೆ, ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬಲ್ಲ ಪ್ರತಿಭೆಗಳನ್ನು ರೂಪಿಸುವ ಪ್ರಮುಖ ಕೇಂದ್ರವಾಗಲಿದೆ ಎಂದೂ ಸಚಿವರು ಹೇಳಿದರು.






