ಡಿ.11ರಿಂದ ಎರಡು ದಿನಗಳ ಐತಿಹಾಸಿಕ ಕಡಲೆಕಾಯಿ ಪರಿಷೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಡಿ.5: ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಡಿ.11 ಮತ್ತು ಡಿ.12 ಇಲ್ಲಿನ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ ದೊಡ್ಡ ಬಸವಣ್ಣ ದೇವಾಲಯದ ಆವರಣದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ ಎಂದರು.
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ ನಡೆಸಲು ತೀರ್ಮಾನಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗುತ್ತಿದೆ. ಸ್ವಚ್ಛತೆ ಕಾಪಾಡುತ್ತಾ ಎಲ್ಲಾ ಬಂದ ಜನಸಾಮಾನ್ಯರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಟ್ರಾಫಿಕ್ ಸಮಸ್ಯೆ ಉಂಟಾಗದಂತೆ ಎಲ್ಲ ರೀತಿಯ ಕ್ರಮ ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಬಸವನಗುಡಿ ಶಾಸಕರಾದ ರವಿ ಸುಬ್ರಮಣ್ಯ, ವಿಧಾನ ಪರಿಷತ್ ಸದಸ್ಯರಾದ ಯುಬಿ ವೆಂಕಟೇಶ್ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.





