ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಮತ್ತೊಂದು ದೂರು
![ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಮತ್ತೊಂದು ದೂರು ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಮತ್ತೊಂದು ದೂರು](https://www.varthabharati.in/h-upload/2023/08/16/1181076-whatsapp-image-2023-08-16-at-100757-pm.webp)
ಬೆಂಗಳೂರು, ಆ.15: ದಲಿತ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಡಿಯಲ್ಲಿ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿರುವ ಬಗ್ಗೆ ವರದಿಯಾಗಿದೆ.
ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ ಅವರು ಎಂಬುವರು ದೂರು ನೀಡಿದ್ದು, ಆರೋಪಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಖಾಸಗಿ ಚಾನೆಲ್ನ ಸಂದರ್ಶನವೊಂದರಲ್ಲಿ ಮಾತನಾಡುವಾಗ ‘ಊರನ್ನು ಹೊಲಗೇರಿ ಮಾಡಬೇಡಿ’ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಅತ್ಯಂತ ಕೀಳರಿಮೆಯಿಂದ ಕೂಡಿದ್ದು, ಒಂದು ಸಮುದಾಯದ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಜವಾಬ್ದಾರಿಯುತ ಜನಪ್ರತಿನಿಧಿಯಾಗಿರು ಅವರು ಈ ರೀತಿಯ ಜಾತಿ ನಿಂದನಾತ್ಮಕ ಹೇಳಿಕೆ ನೀಡುವುದು ಖಂಡನೀಯ ಮತ್ತು ಅಕ್ಷಮ್ಯ ಅಪರಾಧವಾಗಿದೆ. ಕಾನೂನಿನ ಪ್ರಕಾರ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಬಿ.ಚನ್ನಕೃಷ್ಣಪ್ಪ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.