ನಟಿ ರಮ್ಯಾಗೆ ಅಶ್ಲೀಲ ಸಂದೇಶ : ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ

ನಟಿ ರಮ್ಯಾ
ಬೆಂಗಳೂರು : ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಮಹಿಳೆಯರ ಸ್ಥಾನಮಾನಕ್ಕೆ ಧಕ್ಕೆಯುಂಟಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೋಮವಾರ ಪತ್ರ ಬರೆದಿದ್ದಾರೆ.
ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ರಮ್ಯಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ಹಿನ್ನೆಲೆ: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರು ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಬಗ್ಗೆ ಜುಲೈ 24ರಂದು ತಮ್ಮ ಅಧಿಕೃತ ಎಕ್ಸ್ ಹಾಗೂ ಇನ್ಸ್ಟಾಗ್ರಾಂ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದ ನಟಿ ರಮ್ಯಾ, ದೇಶದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಭರವಸೆಯ ಬೆಳಕು. ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ ಎಂದು ಪೋಸ್ಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆಯಾಗಿ, ನಟ ದರ್ಶನ್ ಅಭಿಮಾನಿಗಳು ನಿರಂತರವಾಗಿ ರಮ್ಯಾ ವಿರುದ್ಧ ಅಶ್ಲೀಲ ಪದಗಳಿಂದ ಸಂದೇಶಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಜು.28ರಂದು ಇನ್ಸ್ಟಾಗ್ರಾಮ್ನಲ್ಲಿ ಸಂದೇಶ ಹಂಚಿಕೊಂಡಿರುವ ರಮ್ಯಾ, ‘ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ, ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀ ದ್ವೇಷದ ಮನಃಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ' ಎಂದು ಅಸಮಾಧಾನ ಹೊರಹಾಕಿದ್ದಾರೆ. ಅದರೊಂದಿಗೆ ದರ್ಶನ್ ಅಭಿಮಾನಿಗಳು ಅವರಿಗೆ ಮಾಡಿರುವ ಅಶ್ಲೀಲ ಸಂದೇಶಗಳನ್ನು ಸಹ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಮಾನ : ಗೃಹ ಸಚಿವರಿಗೆ ‘ಫೈರ್’ ಪತ್ರ
ನಟಿ ರಮ್ಯಾ ವಿರುದ್ಧ ನಡೆದ ಅಶ್ಲೀಲ ಹಾಗೂ ಮಹಿಳಾ ವಿರೋಧಿ ಸಾಮಾಜಿಕ ಜಾಲತಾಣ ದೌರ್ಜನ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಫಿಲಂ ಇಂಡಸ್ಟ್ರೀ ಫಾರ್ ರೈಟ್ಸ್ ಅಂಡ್ ಈಕ್ವಾಲಿಟಿ(ಫೈರ್) ಸಂಸ್ಥೆಯು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಪತ್ರದ ಮೂಲಕ ಸೋಮವಾರ ಕೋರಿದೆ.
ಸಂವಿಧಾನದಲ್ಲಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮಗಳ ಹಕ್ಕುಗಳು(ಆರ್ಟಿಕಲ್ 19) ನಮ್ಮ ಪ್ರಜಾಪ್ರಭುತ್ವದ ಬಾಳಿಗೆ ಆಧಾರಸ್ತಂಭವಾಗಿವೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು ಅವುಗಳ ನಡುವೆ ಸಂವಾದ ನಡೆಯಬೇಕು. ಆದರೆ ಆ ಸಂವಾದ ಸಭ್ಯತೆಯೊಂದಿಗೆ ಮತ್ತು ಗೌರವಪೂರ್ಣವಾಗಿ ನಡೆಯಬೇಕು. ಆದರೆ, ನಟಿ ರಮ್ಯಾ ಅವರ ವಿರುದ್ಧ ನಡೆಯುತ್ತಿರುವ ದ್ವೇಷಪೂರಿತ ದೌರ್ಜನ್ಯ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಮಾನವಾಗಿದೆ ಮತ್ತು ಇದು ಆನ್ಲೈನ್ ಮಹಿಳಾ ದ್ವೇಷದ ಆಳವಾದ ಸಮಸ್ಯೆಯನ್ನು ತೋರಿಸುತ್ತದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಗೃಹ ಇಲಾಖೆ ಮತ್ತು ಸೈಬರ್ ಕ್ರೈ ಪ್ರಾಧಿಕಾರಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ರಮ್ಯಾ ಪರ ನಿಲ್ಲದಿದ್ದರೆ ನಾವು ಕಲಾವಿದರಾಗಿರಲು ನಾಚಿಕೆಯಾಗಬೇಕು!: ಪ್ರಥಮ್
ರಮ್ಯಾ ಮತ್ತು ದರ್ಶನ್ ಅಭಿಮಾನಿಗಳ ವಿವಾದದ ನಡುವೆ ಚಿತ್ರನಟ ಪ್ರಥಮ್, ರಮ್ಯಾ ಅವರ ಪರವಾಗಿ ಧ್ವನಿ ಎತ್ತಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಥಮ್, ‘ನಾನು ರಮ್ಯಾ ಮೇಡಂ ಘನತೆಗೆ ಬೆಂಬಲ ನೀಡುತ್ತೇನೆ. ಎಲ್ಲರೂ ನಟಿ ರಮ್ಯಾ ಪರ ನಿಲ್ಲೋಣ. ಈಗಲೂ ನಾವು ರಮ್ಯಾರವರ ಆತ್ಮಗೌರವದ ಪರ ನಿಲ್ಲದೇ ಹೋದರೆ ನಾವು ಕಲಾವಿದರಾಗೋಕೆ ನಾಚಿಕೆಯಾಗಬೇಕು. ಕನ್ನಡ ಚಿತ್ರರಂಗವನ್ನು ಭಯದಿಂದ ಮುಕ್ತಗೊಳಿಸೋಣ. ಇಷ್ಟೆಲ್ಲಾ ಆದರೂ ಜಾಣಕಿವುಡರಾಗಿರೋ ಪುಣ್ಯಾತ್ಮ ಕಲಾವಿದರಿಗೆ ದೇವರು ನೂರ್ಕಾಲ ಆಯಸ್ಸು ನೀಡಲಿ’ ಎಂದು ಬರೆದುಕೊಂಡಿದ್ದಾರೆ.
‘ಅಣ್ಣಾವ್ರು ಅಭಿಮಾನಿಗಳೇ ದೇವರೆಂದು ಹೇಳುತ್ತಿದ್ದರು. ಈಗ ಸ್ಟಾರ್ ನಟರ ಹೆಸರಲ್ಲಿ ಕೆಲ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಟ ಹಾಗೂ ನಟಿಯರ ಬಗ್ಗೆ, ಸಿನಿಮಾಗಳ ಬಗ್ಗೆ ಕೆಟ್ಟ ಪೋಸ್ಟ್ ಹಾಕುವುದು ಸಾಮಾನ್ಯವಾಗಿಬಿಟ್ಟಿದೆ. ಅಂಥವರನ್ನು ಸುಮ್ಮನೆ ಬಿಡಬಾರದು. ಈಗ ನಟಿ ರಮ್ಯಾ ಅವರಿಗೆ ಅಶ್ಲೀಲ ಮೆಸೇಜ್, ಕೆಟ್ಟ ಪೋಸ್ಟ್ ಹಾಕಿರುವವರಿಗೆ ಶಿಕ್ಷೆ ಆಗಬೇಕು.’
-ನರಸಿಂಹಲು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ.







