ಮುಖ್ಯಮಂತ್ರಿಗಳ ಕಾರ್ಯದರ್ಶಿಗಳ ನೇಮಕ

ಬೆಂಗಳೂರು : ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಹಾಗೂ ಕಾರ್ಯದರ್ಶಿಯಾಗಿ ರಾಜೇಂದ್ರ ಚೋಳನ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುಷಾರ್ ಗಿರಿನಾಥ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಜವಾಬ್ದಾರಿ ನೀಡಲಾಗಿದೆ.
ಇದರೊಂದಿಗೆ, ತುಷಾರ್ ಗಿರಿನಾಥ್ ಅವರು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದುವರಿಸಲಿದ್ದಾರೆ. ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಚೋಳನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.
ಇದರ ಜೊತೆಗೆ, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಹುದ್ದೆಯ ಹೆಚ್ಚುವರಿ ಉಸ್ತುವಾರಿಯಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ಈ ಜವಾಬ್ದಾರಿಯಿಂದ ವಿಮುಕ್ತಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.




